ಕಾಸರಗೋಡು: ಭ್ರಷ್ಟಾಚಾರದ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್ ತಿಳಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಿಚಕ್ಷಣ ಸಮಿತಿ ಸಭೆಯ ಅಧ್ಯಕ್ಷತೆ ವಹಿ ಮಾತನಾಡಿದರು.
ಸರ್ಕಾರಿ ಸವಲತ್ತುಗಳನ್ನು ತಳಮಟ್ಟಕ್ಕೆ ತಲುಪಿಸುವ ನಿಟ್ಟಿನಲ್ಲಿ ಗ್ರಾಮ ಮತ್ತು ಪಂಚಾಯಿತಿ ಅಧಿಕಾರಿಗಳು ಜನಸಾಮಾನ್ಯರ ಜತೆ ಜನಸ್ನೇಹಿಯಾಗಿ ಕೆಲಸ ನಿರ್ವಹಿಸಬೇಕು. ಜತೆಗೆ ಎಲ್ಲ ಇಲಾಖೆಗಳ ಕಾರ್ಯಚಟುವಟಿಕೆಗಳು ಪಾರದರ್ಶಕ ಹಾಗೂ ಭ್ರಷ್ಟಾಚಾರ ಮುಕ್ತವಾಗುವಂತೆ ಇಲಾಖೆ ಮುಖ್ಯಸ್ಥರು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ವಿಜಿಲೆನ್ಸ್ ಡಿವೈಎಸ್ಪಿ ಕೆ.ವಿ.ವೇಣುಗೋಪಾಲನ್ ಮಾತನಾಡಿ, ಮೂರು ತಿಂಗಳಿಗೊಮ್ಮೆ ಜಾಗೃತ ಸಮಿತಿ ಸಭೆ ನಡೆಯಲಿದ್ದು, ಮುಂದಿನ ಸಮಿತಿಯಿಂದ ರೆಸಿಡೆನ್ಶಿಯಲ್ ಸಂಘದ ಪದಾಧಿಕಾರಿಗಳು, ಮಾನವ ಹಕ್ಕುಗಳ ಕಾರ್ಯಕರ್ತರು ಸೇರಿ ನಾನಾ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರನ್ನು ಸಮಿತಿಯಲ್ಲಿ ಒಳಪಡಿಸಿಕೊಳ್ಳಲಾಗುವುದು ಎಂದು ತಿಳಿಸಿದರು.
ಎಡಿಎಂ ಕೆ.ನವೀನಬಾಬು ಮಾತನಾಡಿ, ಭ್ರಷ್ಟಾಚಾರವು ಸಮಾಜವನ್ನು ಕಿತ್ತು ತಿನ್ನುವ ಮಾರಕ ಕಾಯಿಲೆಯಾಗಿದ್ದು, ಇದಕ್ಕೆ ಕಡಿವಾಣ ಹಾಕದಿದ್ದರೆ ಸಮಾಜದ ಬೆಳವಣಿಗೆ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ತಿಳಿಸಿದರು. ಸಾರ್ವಜನಿಕರು ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು. ಡಿವೈಎಸ್ಪಿ ಪಿ.ಕೆ.ಸಾಬು, ವಿವಿಧ ಇಲಾಖೆಗಳ ಜಿಲ್ಲಾ ಅಧಿಕಾರಿಗಳು, ರಾಜಕೀಯ ಪಕ್ಷದ ಪ್ರತಿನಿಧಿಗಳು ಉಪಸ್ಥಿತರಿದ್ದರು.