ನವದೆಹಲಿ: ಮಣಿಪುರದ ಪರಿಸ್ಥಿತಿ ಕುರಿತು ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿಕೆ ನೀಡಬೇಕು ಎಂಬ ಪ್ರತಿಪಕ್ಷಗಳ ಸಂಸದರ ಬೇಡಿಕೆ "ಸರಿಯಾಗಿದೆ" ಎಂದ ಜಮ್ಮು ಮತ್ತು ಕಾಶ್ಮೀರ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು, ಮಣಿಪುರ ಮುಖ್ಯಮಂತ್ರಿಯನ್ನು ಇನ್ನೂ ಏಕೆ ತೆಗೆದುಹಾಕಿಲ್ಲ ಎಂದು ಸೋಮವಾರ ಪ್ರಶ್ನಿಸಿದ್ದಾರೆ.
ಪ್ರೆಸ್ ಕ್ಲಬ್ ಆಫ್ ಇಂಡಿಯಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲಿಕ್ ಅವರು, ಪ್ರಧಾನಿ ಮೋದಿ ಅವರು ಮಣಿಪುರ ಹಿಂಸಾಚಾರದ ಬಗ್ಗೆ ಹೇಳಿಕೆ ನೀಡುವುದರಿಂದ ಯಾಕೆ ಹಿಂದೆ ಸರಿಯುತ್ತಿದ್ದಾರೆ ಎಂದು ನನಗೆ ಅರ್ಥವಾಗುತ್ತಿಲ್ಲ ಎಂದಿದ್ದಾರೆ.ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಣಿಪುರದ ಪರಿಸ್ಥಿತಿ ಕುರಿತು ಸದನದಲ್ಲಿ ಚರ್ಚಿಸಲಾಗುವುದು ಎಂದು ಭರವಸೆ ನೀಡಿದ ನಂತರವೂ ಮಣಿಪುರದ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ ಅವರೇ ಹೇಳಿಕೆ ನೀಡಬೇಕು ಎಂದು ವಿರೋಧ ಪಕ್ಷದ ಸದಸ್ಯರು ಪಟ್ಟುಹಿಡಿದು ಪ್ರತಿಭಟನೆ ನಡೆಸಿದ್ದರಿಂದ ಲೋಕಸಭೆಯ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲಾಗಿದೆ.
ನಂತರ, ಮಣಿಪುರದ ಪರಿಸ್ಥಿತಿಯ ಬಗ್ಗೆ ವರದಿರಾರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಲಿಕ್ ಅವರು, ಮೇ 4ರ ವಿಡಿಯೋ ವೈರಲ್ ಆದ ನಂತರವೂ ಅವರು(ಮಣಿಪುರ) ಮುಖ್ಯಮಂತ್ರಿಯನ್ನು ತೆಗೆದುಹಾಕಿಲ್ಲ... ಎರಡು ತಿಂಗಳಿಗಿಂತ ಹೆಚ್ಚು ದಿನಗಳಿಂದ ಹಿಂಸಾಚಾರ ನಡೆಯುತ್ತಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಇಡೀ ದೇಶಕ್ಕೆ ನಾಚಿಕೆಗೇಡಿನ ಸಂಗತಿಯಾಗಿದೆ" ಎಂದು ಹೇಳಿದ್ದಾರೆ.