ಇಂಫಾಲ: ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಅಪರಿಚಿತ ಬಂದೂಕುಧಾರಿಗಳು ನಡೆಸಿದೆ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಇಬ್ಬರು ಸ್ವಯಂಸೇವಕರು ಸಾವನ್ನಪ್ಪಿದ್ದಾರೆಂದು ಪೊಲೀಸರು ಭಾನುವಾರ ಮಾಹಿತಿ ನೀಡಿದ್ದಾರೆ.
ತಡರಾತ್ರಿ ಖೋಯಿಜುಮಂತಬಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. "ಗ್ರಾಮದ ಸ್ವಯಂಸೇವಕರು" ತಾತ್ಕಾಲಿಕ ಬಂಕರ್‌ನಲ್ಲಿ ಕಾವಲು ಕಾಯುತ್ತಿದ್ದರು. ಈ ವೇಳೆ ಗುಂಡಿನ ದಾಳಿ ನಡೆದಿದೆ ಎಂದು ಹೇಳಿದ್ದಾರೆ.
ಭದ್ರತಾ ಪಡೆಗಳು ಸ್ಥಳಕ್ಕೆ ತೆರಳುವವರೆಗೂ ಸ್ಥಳದಲ್ಲಿ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.
ಈಶಾನ್ಯ ರಾಜ್ಯದಲ್ಲಿ ಇದುವರೆಗೆ ಮೈಟೆಯಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ 100 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಮಣಿಪುರದ ಜನಸಂಖ್ಯೆಯ ಸುಮಾರು 53 ಪ್ರತಿಶತದಷ್ಟಿರುವ ಮೈತೈಗಳು ಇಂಫಾಲ್ ಕಣಿವೆಯಲ್ಲಿ ವಾಸಿಸುತ್ತಿದ್ದಾರೆ.ಶೇ.40ರಷ್ಟಿರುವ ಬುಡಕಟ್ಟು ಜನಾಂಗದವರು, ನಾಗಾಗಳು ಮತ್ತು ಕುಕಿಗಳು ಬೆಟ್ಟದ ಪ್ರದೇಶಗಳಲ್ಲಿ ವಾಸವಿದ್ದಾರೆ.