ನವದೆಹಲಿ: ಎಎಪಿ ನಾಯಕ ಸಂಜಯ್ ಸಿಂಗ್ ಅಮಾನತು ಖಂಡಿಸಿ ಮತ್ತು ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷಗಳ ಮೈತ್ರಿಕೂಟ ಐಎನ್ ಡಿಎಐ(ಇಂಡಿಯಾ) ಸಂಸತ್ತಿನ ಆವರಣದಲ್ಲಿ ಅಹೋರಾತ್ರಿ ಧರಣಿ ನಡೆಸಲು ಸೋಮವಾರ ನಿರ್ಧರಿಸಿದೆ.
ಸೋಮವಾರ ಬೆಳಗ್ಗೆ ಕಲಾಪ ಆರಂಭಕ್ಕೂ ಮುನ್ನವೇ ಸಂಸತ್ತಿನ ಗಾಂಧಿ ಪ್ರತಿಮೆಯ ಬಳಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರ ನೇತೃತ್ವದಲ್ಲಿ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಆರಂಭಿಸಿದ್ದು, ಇಂಡಿಯಾ ಮೈತ್ರಿಕೂಟದ ನಾಯಕರು ಅಹೋರಾತ್ರಿ ಧರಣಿ ನಡೆಸಲಿದ್ದಾರೆ ಎಂದು ಹಿರಿಯ ಮುಖಂಡರು ತಿಳಿಸಿದ್ದಾರೆ. ಅಲ್ಲದೆ ಮಂಗಳವಾರವೂ ಪ್ರತಿಭಟನೆ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.
ಕಳೆದ ವರ್ಷ ಜುಲೈನಲ್ಲಿ 20 ರಾಜ್ಯಸಭಾ ಸದಸ್ಯರನ್ನು ಅಮಾನತುಗೊಳಿಸಿದ ನಂತರ ಪ್ರತಿಪಕ್ಷಗಳು ಸಂಸತ್ತಿನ ಸಂಕೀರ್ಣದೊಳಗೆ 50 ಗಂಟೆಗಳ ಕಾಲ ಅಹೋರಾತ್ರಿ ಧರಣಿ ನಡೆಸಿದ್ದವು.
ಇದೀಗ ಮುಂಗಾರು ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಂಡಿರುವ ಎಎಪಿ ಸಂಸದ ಸಂಜಯ್ ಸಿಂಗ್ ಅವರು ಇಂಡಿಯಾದ ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಸಂಜಯ್ ಸಿಂಗ್ ಅವರ ಪತ್ನಿ ಈಗಾಗಲೇ ಸ್ಥಳಕ್ಕೆ ಅಗತ್ಯ ವಸ್ತುಗಳನ್ನು ತಂದಿದ್ದಾರೆ.
ಎಲ್ಲ ಪಕ್ಷಗಳು ತಮ್ಮ ನಾಯಕರ ಪಟ್ಟಿಯನ್ನು ಸಿದ್ಧಪಡಿಸಿದ್ದು, ಅವರು ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸುತ್ತಾರೆ. ಪಕ್ಷಗಳಲ್ಲಿ ಸಂಪೂರ್ಣ ಒಗ್ಗಟ್ಟು ಇದೆ. ಸಿಂಗ್ ಅವರ ಅಮಾನತನ್ನು ಖಂಡಿಸಲಾಗುತ್ತಿದೆ. ಆದರೆ ಇದು ರಾಜ್ಯಸಭೆಯಲ್ಲಾಗಲಿ ಲೋಕಸಭೆಯಲ್ಲಾಗಲಿ ಮಣಿಪುರದ ಬಗ್ಗೆ ಪ್ರಧಾನಿ ಮೋದಿ ಮಾತನಾಡಬೇಕೆಂದು ಒತ್ತಾಯಿಸುವ ಪ್ರತಿಭಟನೆಯಾಗಿದೆ ಎಂದು ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.
ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮುಕ್ತ ಚರ್ಚೆಗೆ ಅವಕಾಶ ನೀಡಬೇಕು ಎಂಬ ಬೇಡಿಕೆಗೆ ಇಂಡಿಯಾ ಮೈತ್ರಿಕೂಟದ ಎಲ್ಲಾ ನಾಯಕರು ಅಚಲವಾಗಿದ್ದಾರೆ ಮತ್ತು ಅವರನ್ನು ಸಮಾಧಾನಪಡಿಸುವ ಸರ್ಕಾರದ ಎಲ್ಲಾ ಪ್ರಯತ್ನಗಳನ್ನು ಹಲವು ಪಕ್ಷಗಳು ತಿರಸ್ಕರಿಸಿವೆ ಎಂದು ಮೂಲಗಳು ತಿಳಿಸಿವೆ.