ಮಂಗಳೂರು: ಮಂಗಳೂರು ಜಂಕ್ಷನ್ ರೈಲು ನಿಲ್ದಾಣವನ್ನು ವಿಶ್ವದರ್ಜೆಗೇರಿಸುವ ನಿಟ್ಟಿನಲ್ಲಿ ಕಾಮಗಾರಿಗೆ ಆಗಸ್ಟ್ 6ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಮಂಗಳೂರು ಜಂಕ್ಷನ್ ರೈಲು ನಿಲ್ದಾಣವನ್ನು ಅಂತರರಾಷ್ಟ್ರೀಯ ಗುಣಮಟ್ಟಕ್ಕೆ ಅನುಗುಣವಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಪ್ರಧಾನಿ ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗುರುವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ರೈಲು ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಮುಂದಾದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಕಟೀಲ್ ಧನ್ಯವಾದ ತಿಳಿಸಿದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2023-24ರ ಬಜೆಟ್ ಭಾಷಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಜಂಕ್ಷನ್, ಮಂಗಳೂರು ಸೆಂಟ್ರಲ್, ಬಂಟ್ವಾಳ ಮತ್ತು ಸುಬ್ರಹ್ಮಣ್ಯ ರೈಲು ನಿಲ್ದಾಣಗಳನ್ನು ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಮೇಲ್ದರ್ಜೆಗೇರಿಸುವುದಾಗಿ ಘೋಷಿಸಿದ್ದರು ಎಂದು ಅವರು ಉಲ್ಲೇಖಿಸಿದರು.
ಮಂಗಳೂರು ಜಂಕ್ಷನ್ ನಿಲ್ದಾಣವನ್ನು 19.32 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುವುದು. ಈ ಯೋಜನೆಯಡಿ ಇತರ ರೈಲು ನಿಲ್ದಾಣಗಳ ಅಭಿವೃದ್ಧಿಯನ್ನು ಶೀಘ್ರದಲ್ಲೇ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.