ಕುಂಬಳೆ: ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ಅವರು ಪುತ್ತಿಗೆ ಗ್ರಾಮ ಪಂಚಾಯತಿ ಕಚೇರಿಗೆ ಭೇಟಿ ನೀಡಿ ಜನಪ್ರತಿನಿಧಿಗಳು, ನೌಕರರು ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು. ಪಂಚಾಯತಿ ವ್ಯಾಪ್ತಿಯ ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ನಲ್ಲಿ ಸೇರ್ಪಡೆಗೊಂಡಿರುವ ಅನೋಡಿಪಳ್ಳ ಪಾರಂಪರಿಕ ಪ್ರದೇಶಕ್ಕೆ ಭೇಟಿ ನೀಡಿದರು. ನಂತರ ಜಿಲ್ಲಾಧಿಕಾರಿಗಳು ಪರಿಶಿಷ್ಟ ಪಂಗಡದ ಕಾಲೋನಿಗಳಿಗೆ ಭೇಟಿ ನೀಡಿ ಬಿದಿರು, ಬಳ್ಳಿಗಳಿಂದ ತಯಾರಿಸಿದ ಕರಕುಶಲ ವಸ್ತುಗಳನ್ನು ಖರೀದಿಸಿದರು. ಪುತ್ತಿಗೆ ಪಂಚಾಯತಿ ಅಧ್ಯಕ್ಷ ಸುಬ್ಬಣ್ಣ ಆಳ್ವ ಹಾಗೂ ಪಂಚಾಯತಿ ಸದಸ್ಯರು ಉಪಸ್ಥಿತರಿದ್ದರು.