ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿದ್ಯಾರ್ಹತೆ ಕುರಿತು ಹೇಳಿಕೆ ನೀಡಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ರಿಲೀಫ್ ನೀಡಲು ನಿರಾಕರಿಸಿದ್ದು, ವಿಚಾರಣೆಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಗುಜರಾತ್ ವಿಶ್ವವಿದ್ಯಾಲಯ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ವಿಚಾರಣೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
ಕೇಜ್ರಿವಾಲ್ ಅವರು ಮನವಿ ಮಾಡಿರುವ ಅರ್ಜಿ ವಿಚಾರಣೆ ಗುಜರಾತ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದ್ದು, ವಿಚಾರಣೆಗೆ ತಡೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಆಗಸ್ಟ್ 29ರಂದು ಕೋರ್ಟ್ ನಿರ್ಧರಿಸುತ್ತದೆ ಎಂಬ ಭರವಸೆಯನ್ನು ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿದೆ.
ಆಗಸ್ಟ್ 11ರಂದು ಇದೇ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿತ್ತು.
ಏನಿದು ಪ್ರಕರಣ?
‘ಗುಜರಾತ್ ವಿಶ್ವವಿದ್ಯಾಲಯ ಮೋದಿಗೆ ನಿಜವಾಗಿಯೂ ಪದವಿ ನೀಡಿದ್ದರೆ, ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಪ್ರಶ್ನೆಗೆ ಉತ್ತರವಾಗಿ ಅದನ್ನು ಯಾಕೆ ನೀಡುತ್ತಿಲ್ಲ? ಯಾಕೆಂದರೆ ಅದು ನಕಲಿ. ದೆಹಲಿ ಮತ್ತು ಗುಜರಾತ್ ವಿಶ್ವವಿದ್ಯಾಲಯಗಳಲ್ಲಿ ಪ್ರಧಾನಿ ವ್ಯಾಸಂಗ ಮಾಡಿದ್ದಲ್ಲಿ, ನಮ್ಮ ಹಳೆಯ ವಿದ್ಯಾರ್ಥಿಯೊಬ್ಬ ದೇಶದ ಪ್ರಧಾನಿಯಾಗಿದ್ದಾರೆ ಎಂದು ವಿಶ್ವವಿದ್ಯಾಲಯಗಳು ಹೇಳಿಕೊಂಡು ಸಂಭ್ರಮಿಸುತ್ತಿದ್ದವು...’ ಎಂದು ವ್ಯಂಗ್ಯಭರಿತವಾಗಿ ಕೇಜ್ರಿವಾಲ್ ಹಾಗೂ ಸಂಜಯ್ ಸಿಂಗ್ ಪತ್ರಿಕಾಗೋಷ್ಠಿ ಹಾಗೂ ತಮ್ಮ ಟ್ವಿಟರ್ ಖಾತೆಯಲ್ಲಿ ಇಂತಹ ಹಲವು ಹೇಳಿಕೆ ಉಲ್ಲೇಖಿಸಿದ್ದರು.