ಇಂಫಾಲ್: ಇಬ್ಬರು ಯುವಕರ ಸಾವು ಖಂಡಿಸಿ ಮಣಿಪುರದ ರಾಜಧಾನಿ ಇಂಫಾಲ್‌ನಲ್ಲಿ ಗುರುವಾರ ಹಿಂಸಾತ್ಮಕ ಪ್ರತಿಭಟನೆ ನಡೆಯುತ್ತಿದ್ದು, ಉದ್ರಿಕ್ತರ ಗುಂಪು ಜಿಲ್ಲಾಧಿಕಾರಿ ಕಚೇರಿಯನ್ನು ಧ್ವಂಸಗೊಳಿಸಿದೆ. ಎರಡು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.
ಇಂಫಾಲ್: ಇಬ್ಬರು ಯುವಕರ ಸಾವು ಖಂಡಿಸಿ ಮಣಿಪುರದ ರಾಜಧಾನಿ ಇಂಫಾಲ್‌ನಲ್ಲಿ ಗುರುವಾರ ಹಿಂಸಾತ್ಮಕ ಪ್ರತಿಭಟನೆ ನಡೆಯುತ್ತಿದ್ದು, ಉದ್ರಿಕ್ತರ ಗುಂಪು ಜಿಲ್ಲಾಧಿಕಾರಿ ಕಚೇರಿಯನ್ನು ಧ್ವಂಸಗೊಳಿಸಿದೆ. ಎರಡು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.
ಜುಲೈನಲ್ಲಿ ನಾಪತ್ತೆಯಾಗಿದ್ದ ಇಬ್ಬರು ಯುವಕರ ಮೃತದೇಹಗಳ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ ನಂತರ ವಿದ್ಯಾರ್ಥಿಗಳು ಮತ್ತೆ ಪ್ರತಿಭಟನೆ ನಡೆಸಿದ್ದು, ಮಂಗಳವಾರ ಬೆಳಿಗ್ಗೆಯಿಂದ ಮಣಿಪುರದ ರಾಜಧಾನಿಯಲ್ಲಿ ಹಿಂಸಾಚಾರ ಭುಗಿಲೆದ್ದಿದೆ.
ಕಳೆದ ರಾತ್ರಿ, ಪ್ರತಿಭಟನಾಕಾರರು ಉರಿಪೋಕ್, ಯೈಸ್ಕುಲ್, ಸಗೋಲ್‌ಬಂಡ್ ಮತ್ತು ತೇರಾ ಪ್ರದೇಶಗಳಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ಘರ್ಷಣೆಗೆ ಇಳಿದಿದ್ದರು. ಪರಿಸ್ಥಿತಿಯನ್ನು ನಿಯಂತ್ರಿಸಲು ಭದ್ರತಾ ಪಡೆಗಳು ಅಶ್ರುವಾಯು ಪ್ರಯೋಗಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭದ್ರತಾ ಸಿಬ್ಬಂದಿ ವಸತಿ ಪ್ರದೇಶಗಳಿಗೆ ಪ್ರವೇಶಿಸುವುದನ್ನು ತಡೆಯಲು ಪ್ರತಿಭಟನಾಕಾರರು ಟೈರ್‌ಗಳನ್ನು ಸುಟ್ಟು, ಬಂಡೆಗಳನ್ನು ರಸ್ತೆಗೆ ಉರುಳಿಸಿ, ಕಬ್ಬಿಣದ ಪೈಪ್‌ಗಳನ್ನು ಅಡ್ಡಲಾಗಿ ಹಾಕಿದರು ಎಂದು ಅವರು ಹೇಳಿದರು.
ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿಯನ್ನು ಧ್ವಂಸ ಮಾಡಿ, ಎರಡು ವಾಹನಗಳಿಗೆ ಬೆಂಕಿ ಹಾಕಿದ್ದಾರೆ. ಸಿಆರ್‌ಪಿಎಫ್ ಸಿಬ್ಬಂದಿ ಪರಿಸ್ಥಿತಿಯನ್ನು ತಹಬದಿಗೆ ತಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮಂಗಳವಾರದಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ 65 ಪ್ರತಿಭಟನಾಕಾರರು ಗಾಯಗೊಂಡಿದ್ದು, ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗುತ್ತಿದ್ದಂತೆ ಇಂಫಾಲ್ ಪೂರ್ವ ಮತ್ತು ಪಶ್ಚಿಮದಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಈ ನಡುವೆ, ತೌಬಲ್ ಜಿಲ್ಲೆಯ ಖೋಂಗ್ಜಾಮ್‌ನಲ್ಲಿರುವ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉದ್ರಿಕ್ತರ ಗುಂಪು ಪೊಲೀಸ್ ವಾಹನವನ್ನು ಸುಟ್ಟು ಹಾಕಿ ಪೊಲೀಸರ ಮೇಲೆ ಹಲ್ಲೆ ನಡೆಸಿದೆ. ಅವರ ಶಸ್ತ್ರಾಸ್ತ್ರಗಳನ್ನು ಕಸಿದುಕೊಂಡಿದೆ ಎಂದೂ ಅವರು ಹೇಳಿದ್ದಾರೆ.