ಸತಾರಾ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಫೋಸ್ಟ್' ವಿಚಾರವಾಗಿ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಎರಡು ಸಮುದಾಯಗಳ ಸದಸ್ಯರು ನಡುವೆ ಸಂಭವಿಸಿದ ಘರ್ಷಣೆಯಲ್ಲಿ ಒಬ್ಬರು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಭಾನುವಾರ ರಾತ್ರಿ ಖಟಾವೊ ತಹಸಿಲ್‌ನ ಪುಸೆವಾಲಿ ಗ್ರಾಮದಲ್ಲಿ ನಡೆದ ಈ ಘಟನೆಯು ಎರಡು ಸಮುದಾಯಗಳ ನಡುವೆ ಉದ್ವಿಗ್ನತೆಗೆ ಕಾರಣವಾಯಿತು.ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಯಿತು.
ಘಟನೆಯಲ್ಲಿ ಕೆಲವು ಮನೆಗಳಿಗೆ ಹಾನಿ ಮಾಡಲಾಗಿದೆ ಎಂದು ಜಿಲ್ಲಾ ಆಡಳಿತದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದು ಏಳರಿಂದ ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಸತಾರಾದ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಸಮುದಾಯದ ಕೆಲವು ಯುವಕರ ಆಕ್ಷೇಪಾರ್ಹ ಪೋಸ್ಟ್ ಎರಡು ಸಮುದಾಯಗಳ ನಡುವೆ ಉದ್ವಿಗ್ನತೆಯನ್ನುಂಟು ಮಾಡಿದ್ದು, ಕೋಮು ಘರ್ಷಣೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಅಡಚಣೆಗೆ ಕಾರಣವಾಯಿತು. ಪೊಲೀಸರು ತಕ್ಷಣ ಸ್ಪಂದಿಸಿದ್ದು, ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಮತ್ತೋರ್ವ ಅಧಿಕಾರಿ ಹೇಳಿದರು.
ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದ್ದು, ಯಾವುದೇ ವದಂತಿಗಳಿಗೆ ಬಲಿಯಾಗದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದೇವೆ. ಈ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಕೆಲವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.