ನವದೆಹಲಿ: 'ಸನಾತನ ಧರ್ಮ' ಕುರಿತು ಹೇಳಿಕೆ ನೀಡಿರುವ ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಕೋರಿದ್ದ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ತಮಿಳುನಾಡು ಸರ್ಕಾರ ಮತ್ತು ಉದಯನಿಧಿ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಸೂಚಿಸಿದೆ.

ನ್ಯಾಯಮೂರ್ತಿ ಅನಿರುದ್ಧ ಬೋಸ್ ಮತ್ತು ಬೇಲಾ ಎಂ.ತ್ರಿವೇದಿ ಅವರನ್ನು ಒಳಗೊಂಡ ನ್ಯಾಯಪೀಠವು ಈ ಸಂಬಂಧ ನೋಟಿಸ್ ಜಾರಿ ಮಾಡಿದೆ.
'ಸನಾತನ ಧರ್ಮ ನಿರ್ಮೂಲನೆ ಮಾಡಬೇಕು'ಎಂಬ ಹೇಳಿಕೆ ನೀಡಿದ ಉದಯನಿಧಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಬಿ.ಜಗನ್ನಾಥ ಎಂಬುವರು ಕೋರ್ಟ್ ಮೆಟ್ಟಿಲೇರಿದ್ದರು.
ವಿಚಾರಣೆ ವೇಳೆ, 'ಸಚಿವರು ಈ ಧರ್ಮ ಕೆಟ್ಟದ್ದು ಮತ್ತು ಆ ಧರ್ಮ ಒಳ್ಳೆಯದು' ಎಂದು ಹೇಳುವಂತೆ ವಿದ್ಯಾರ್ಥಿಗಳನ್ನು ಒತ್ತಾಯಿಸಿದ್ದರು ಎಂದು ಅರ್ಜಿದಾರರ ಪರ ವಕೀಲ ದಾಮ ಶೇಷಾದ್ರಿ ನಾಯ್ಡು ನ್ಯಾಯಾಲಯಕ್ಕೆ ತಿಳಿಸಿದರು.
'ಅಂಥ ಹೇಳಿಕೆ ನೀಡದಂತೆ ಸಚಿವರಿಗೆ ಕೋರ್ಟ್ ಎಚ್ಚರಿಕೆ ನೀಡಬೇಕು' ಎಂದೂ ಮನವಿ ಮಾಡಿದರು.
'ನೋಟಿಸ್ ಜಾರಿ ಮಾಡಿದ್ದೇವೆ. ಆದರೆ, ಎಫ್‌ಐಆರ್ ದಾಖಲೆಗೆ ಅರ್ಜಿ ಸಲ್ಲಿಸುವ ಮೂಲಕ ನೀವು ಸುಪ್ರೀಂ ಕೋರ್ಟ್ ಅನ್ನು ಪೊಲೀಸ್ ಠಾಣೆಯಾಗಿ ಪರಿವರ್ತಿಸಿದ್ದೀರಿ. ನೀವು ಈ ವಿಷಯವಾಗಿ ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಬೇಕಿತ್ತು' ಎಂದು ನ್ಯಾಯಪೀಠ ಹೇಳಿತು.
ಉದಯನಿಧಿ ಅವರು ಸಚಿವರಾದ ಕಾರಣ ಯಾರೂ ಎಫ್‌ಐಆರ್ ದಾಖಲಿಸಿಕೊಳ್ಳಲಿಲ್ಲ. ಹೀಗಾಗಿ ಅನಿವಾರ್ಯ ಕಾರಣದಿಂದ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಬೇಕಾಯಿತು ಎಂದು ನಾಯ್ಡು ಹೇಳಿದರು.