ನವದೆಹಲಿ: 'ಒಂದು ರಾಷ್ಟ್ರ, ಒಂದು ಚುನಾವಣೆ' ಸಾಧ್ಯತೆಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರವು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಸಮಿತಿಯನ್ನು ರಚಿಸಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.
ನವದೆಹಲಿ: 'ಒಂದು ರಾಷ್ಟ್ರ, ಒಂದು ಚುನಾವಣೆ' ಸಾಧ್ಯತೆಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರವು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಸಮಿತಿಯನ್ನು ರಚಿಸಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.
ಸೆಪ್ಟೆಂಬರ್ 18 ಮತ್ತು 22ರ ನಡುವೆ ಸರ್ಕಾರವು ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದ ಒಂದು ದಿನದ ನಂತರ ಈ ಸುದ್ದಿ ಹೊರಬಿದ್ದಿದೆ.
ಏಕಕಾಲದಲ್ಲಿ ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಸುವ ಪರಿಕಲ್ಪನೆ ಕುರಿತಂತೆ ಹಲವು ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಬಲವಾಗಿ ಪ್ರತಿಪಾದಿಸುತ್ತಿದ್ದಾರೆ. ಲೋಕಸಭೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಆ ಪರಿಕಲ್ಪನೆಗೆ ಒತ್ತು ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ ಸಮಿತಿ ರಚಿಸಿದೆ.
ಇದೇ ವರ್ಷ ನವೆಂಬರ್-ಡಿಸೆಂಬರ್ ತಿಂಗಳಲ್ಲಿ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮುಂದಿನ ವರ್ಷ ಮೇ ಅಥವಾ ಜೂನ್ ತಿಂಗಳಿನಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ.
'ಒಂದು ದೇಶ, ಒಂದು ಚುನಾವಣೆ'ಯ ಕಲ್ಪನೆ ಬಗ್ಗೆ ಹಿಂದೆ ಪ್ರತಿಪಾದಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, 'ಈ ವ್ಯವಸ್ಥೆ ಭಾರತಕ್ಕೆ ಅಗತ್ಯವಾಗಿದೆ. ಏಕೆಂದರೆ, ವರ್ಷದಲ್ಲಿ ಆಗಾಗ್ಗೆ ನಡೆಯುತ್ತಿರುವ ಚುನಾವಣೆಗಳು ಅಭಿವೃದ್ಧಿ ಕಾರ್ಯಕ್ಕೆ ಅಡ್ಡಿಯಾಗಿದೆ' ಎಂದಿದ್ದರು.
ಲೋಕಸಭೆ, ವಿಧಾನಸಭೆ ಹಾಗೂ ಪಂಚಾಯತಿ ಚುನಾವಣೆಗಳಿಗೆ ಒಂದೇ ಮತದಾರರ ಪಟ್ಟಿಯ ವಿಷಯವನ್ನೂ ಪ್ರಸ್ತಾಪಿಸಿದ್ದ ಅವರು, ಪ್ರತ್ಯೇಕ ಪಟ್ಟಿಯು ಸಂಪನ್ಮೂಲದ ವ್ಯರ್ಥ ಎಂದಿದ್ದರು.