ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್‌ನ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ತಮಗೆ ಸಿಗುವ ಪ್ರತಿಯೊಂದು ಅವಕಾಶದಲ್ಲೂ ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿದ್ದಾರೆ ಎಂದು ದೆಹಲಿ ಪೊಲೀಸರು ಶನಿವಾರ ನ್ಯಾಯಾಲಯಕ್ಕೆ ತಿಳಿಸಿದರು.
ಅವಕಾಶ ಸಿಕ್ಕಾಗಲೆಲ್ಲಾ ಅವರು ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿದ್ದಾರೆ. ಅಂತಹ ಯಾವುದೇ ಅವಕಾಶವನ್ನು ಅವರು ಎಂದಿಗೂ ಕಳೆದುಕೊಂಡಿಲ್ಲ ಮತ್ತು ಬಿಜೆಪಿ ಸಂಸದರ ವಿರುದ್ಧ ಈ ಆರೋಪಗಳನ್ನು ದಾಖಲಿಸಲು ತಮ್ಮ ಬಳಿ ಸಾಕಷ್ಟು ಪುರಾವೆಗಳಿವೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಆರು ಮಹಿಳಾ ಕುಸ್ತಿಪಟುಗಳು ಮಾಡಿರುವ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಅಧಿಕೃತವಾಗಿ ಲೈಂಗಿಕ ದೌರ್ಜನ್ಯ ಆರೋಪ ಹೊರಿಸುವ ವಿಚಾರವಾಗಿ ದೆಹಲಿಯ ರೋಸ್ ಅವೆನ್ಯೂ ಕೋರ್ಟ್‌ನಲ್ಲಿ ಪೊಲೀಸರು ಹೇಳಿಕೆ ನೀಡಿದ್ದಾರೆ. ಪೊಲೀಸರು ಈ ಹಿಂದೆ ಬ್ರಿಜ್ ಭೂಷಣ್ ವಿರುದ್ಧ ಚಾರ್ಜ್‌ಶೀಟ್ ಅನ್ನು ಸಲ್ಲಿಸಿದ್ದರು.
ಶನಿವಾರ ನ್ಯಾಯಾಲಯಕ್ಕೆ ಹಾಜರಾಗುವುದರಿಂದ ಬ್ರಿಜ್ ಭೂಷಣ್ ಸಿಂಗ್‌ಗೆ ವಿನಾಯಿತಿ ನೀಡಲಾಗಿತ್ತು.
ದೆಹಲಿ ಪೊಲೀಸರು ಜೂನ್ 15 ರಂದು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354, 354 ಎ (ಲೈಂಗಿಕ ಕಿರುಕುಳ), 354 ಡಿ (ಹಿಂಬಾಲಿಸುವಿಕೆ) ಮತ್ತು 506 (ಅಪರಾಧ ಬೆದರಿಕೆ) ಅಡಿ ಬಿಜೆಪಿ ಸಂಸದರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಮುಂದಿನ ವಿಚಾರಣೆ ಅಕ್ಟೋಬರ್ 7 ರಂದು ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ನಡೆಯಲಿದೆ.