ನವದೆಹಲಿ: ಚೀನಾ ಪರ ಪ್ರಚಾರಕ್ಕಾಗಿ ದೇಣಿಗೆ ಪಡೆದ ಆರೋಪದ ಮೇಲೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಬಂಧಿತರಾಗಿರುವ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ದೆಹಲಿ ನ್ಯಾಯಾಲಯ ಮಂಗಳವಾರ 10 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಬಂಧಿತ ಇಬ್ಬರು ಆರೋಪಿಗಳನ್ನು ಇಂದು ಮಧ್ಯಾಹ್ನ 2:50 ರ ಸುಮಾರಿಗೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಹರ್ದೀಪ್ ಕೌರ್ ಅವರ ಮುಂದೆ ಹಾಜರುಪಡಿಸಲಾಯಿತು.
ಆರೋಪಿಗಳ ವಿಚಾರಣೆ ನಡೆಸಿದ ನ್ಯಾಯಾಧೀಶ ಹರ್ದೀಪ್ ಕೌರ್ ಅವರು ಇಬ್ಬರಿಗೂ 10 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.
ಪುರ್ಕಾಯಸ್ಥ ಮತ್ತು ಚಕ್ರವರ್ತಿ ಅವರನ್ನು ದೆಹಲಿ ಪೊಲೀಸರ ವಿಶೇಷ ಘಟಕ ಕಳೆದ ಮಂಗಳವಾರ ಬಂಧಿಸಿದ್ದು, ದೆಹಲಿಯಲ್ಲಿರುವ ನ್ಯೂಸ್‌ಕ್ಲಿಕ್ ಕಚೇರಿಯನ್ನು ಪೊಲೀಸರು ಸೀಲ್ ಮಾಡಿದ್ದಾರೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಪತ್ರಕರ್ತರನ್ನು ವಿಚಾರಣೆಗೊಳಪಡಿಸಲಾಗಿದೆ.