ಕಾಸರಗೋಡು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಛೇರಿ ಹಾಗೂ ಮಹಿಳಾ ಸಬಲೀಕರಣಕ್ಕಾಗಿ ಜಿಲ್ಲಾ ಕೇಂದ್ರದ ವತಿಯಿಂದ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಕಲಾಜಾಥ ಅ. 11ರಂದು ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ವಠಾರದಲ್ಲಿ ಜರುಗಲಿರುವುದು.
ಬೆಳಗ್ಗೆ 9.30ಕ್ಕೆ ನಡೆಯುವ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್ ಜಾಥಾಕ್ಕೆ ಹಸಿರು ನಿಶಾನಿ ತೋರಿಸುವ ಮೂಲಕ ಚಾಲನೆ ನೀಡುವರು. ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆಯ ಮಹತ್ವದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕಲಾಜಾಥಾ ಆಯೋಜಿಸಲಾಗಿದೆ. ಜಿಲ್ಲಿಯ ವಿವಿಧೆಡೆ ಸಂಚರಿಸಲಿರುವ ಜಾಥಾ ಸಂಜೆ 4:30ಕ್ಕೆ ಕಾಞಂಗಾಡಿನ ಮಾಂದೋಪ್‍ನಲ್ಲಿ ಸಮಾರೋಪಗೊಳ್ಳಲಿದೆ. ಅಪರ ಜಿಲ್ಲಾಧಿಕಾರಿ ಸುಫಿಯಾನ್ ಅಹಮದ್ ಸಮಾರೋಪ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ವಿ.ಎಸ್.ಶಿಮ್ನಾ ಅಧ್ಯಕ್ಷತೆ ವಹಿಸುವರು.
ಹೆಣ್ಣು ಮಕ್ಕಳ ಪ್ರಗತಿಯನ್ನು ಖಾತ್ರಿಪಡಿಸುವ ಮತ್ತು ಅವರ ಹಕ್ಕುಗಳನ್ನು ಸಂರಕ್ಷಿಸುವ ಉದ್ದೇಶದಿಂದ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆ ಕೇಂದ್ರ ಸರ್ಕಾರ 2015 ರಲ್ಲಿ ಪ್ರಾರಂಭಿಸಿದ ಯೋಜನೆಯಾಗಿದೆ. ಹೆಣ್ಣು ಮಕ್ಕಳ ರಕ್ಷಣೆ ಮತ್ತು ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಜಾಥಾದ ಮೂಲಕ ಹೆಣ್ಣು ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಿಲ್ಲೆಯ ವಿವಿಧೆಡೆ ವಿವಿಧ ಬೀದಿ ನಾಟಕ, ಓಟ, ನೃತ್ಯ, ಫ್ಲಾಶ್ ಮಾಬ್, ಸಿಂಗಾರಿ ಮೇಳವನ್ನು ಪ್ರದರ್ಶಿಸಲಾಗುವುದು.