ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸರಿಯಾದ ಸಮಯಕ್ಕೆ ಚುನಾವಣೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ಸೋಮವಾರ ಹೇಳಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಅವರು, ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದ ಬಳಿಕ ಈ ವಿಷಯ ತಿಳಿಸಿದರು.
ಭದ್ರತಾ ಪರಿಸ್ಥಿತಿ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ಇತರ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಆಯೋಗಕ್ಕೆ ಇದು 'ಸರಿಯಾದ ಸಮಯ' ಎಂದು ಅನ್ನಿಸಿದಾಗ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಸಲಾಗುವುದು ಎಂದು ಅವರು ಹೇಳಿದರು.
ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ರಾಜೀವ್ ಕುಮಾರ್, ಉಚಿತ ಯೋಜನೆಗಳ ಘೋಷಣೆಗಳು ಯಾವಾಗಲೂ ಜನಪ್ರಿಯತೆಯ ಅಂಶವನ್ನು ಒಳಗೊಂಡಿರುತ್ತವೆ ಮತ್ತು ಈ ಉಚಿತಗಳಿಗೆ ಹಣ ಎಲ್ಲಿಂದ ಬರುತ್ತದೆ ಎಂಬುದನ್ನು ತಿಳಿದುಕೊಳ್ಳುವ ಹಕ್ಕು ಸಾರ್ವಜನಿಕರಿಗೆ ಇದೆ ಎಂದು ಹೇಳಿದರು.
ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ನವೆಂಬರ್ 7 ರಿಂದ 30 ರವರೆಗೆ ವಿವಿಧ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಐದು ರಾಜ್ಯಗಳ ಮತ ಎಣಿಕೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ಹೇಳಿದೆ.
2024ರ ಲೋಕಸಭಾ ಚುನಾವಣೆಗೆ ಪಂಚ ರಾಜ್ಯಗಳ ಚುನಾವಣೆಯು ಸೆಮಿಫೈನಲ್ಸ್ ಎಂದೇ ಪರಿಗಣಿಸಲಾಗಿದೆ. ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೂ ಮುನ್ನ ನಡೆಯಲಿರುವ ವಿಧಾನಸಭೆ ಚುನಾವಣೆ ಇದಾಗಿದೆ.