ಇಂಫಾಲ: ರಾಜ್ಯದಲ್ಲಿ ಮೊಬೈಲ್ ಇಂಟರ್ನೆಟ್ ನಿಷೇಧವನ್ನು ನವೆಂಬರ್ 8ರವರೆಗೆ ವಿಸ್ತರಿಸಲಾಗಿದೆ ಎಂದು ಮಣಿಪುರದ ಅಧಿಕಾರಿಗಳು ತಿಳಿಸಿದ್ದಾರೆ.
ಮೈತೇಯಿ ಹಾಗೂ ಕುಕಿ ಸಮುದಾಯಗಳ ನಡುವೆ ಹಿಂಸಾಚಾರ ಭುಗಿಲೆದ್ದ ಬಳಿಕ ಮೇ 3ರಿಂದ ಮಣಿಪುರದಲ್ಲಿ ಇಂಟರ್ನೆಟ್ ನಿರ್ಬಂಧ ಇದೆ ಎಂದು ಅವರು ಹೇಳಿದ್ದಾರೆ.
ಮಣಿಪುರ ರೈಫಲ್ಸ್ ಕ್ಯಾಂಪ್‌ನ ಶಸ್ತ್ರಾಗಾರದ ಮೇಲೆ ಗುಂಪೊಂದು ದಾಳಿ ಮಾಡಿ, ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಿದ ಬಳಿಕ ಈ ಆದೇಶ ಹೊರಬಿದ್ದಿದೆ.
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಗಂಭೀರ ಪರಿಣಾಮಗಳನ್ನು ಉಂಟುಮಾಡುವ, ಸಾರ್ವಜನಿಕರನ್ನು ಪ್ರಚೋದಿಸುವ ಚಿತ್ರಗಳು, ದ್ವೇಷದ ಭಾಷಣಗಳು ಮತ್ತು ದ್ವೇಷದ ವಿಡಿಯೊ ಸಂದೇಶಗಳ ಪ್ರಸಾರಕ್ಕಾಗಿ ಸಮಾಜ ವಿರೋಧಿಗಳು ಸಾಮಾಜಿಕ ಮಾಧ್ಯಮವನ್ನು ವ್ಯಾಪಕವಾಗಿ ಬಳಸುತ್ತಾರೆ ಎಂಬ ಆತಂಕದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಹಿಂಸಾಚಾರ ಇಲ್ಲದ ಜಿಲ್ಲಾ ಕೇಂದ್ರಗಳಲ್ಲಿ ಮೊಬೈಲ್ ಇಂಟರ್ನೆಟ್ ಅನ್ನು ಸರ್ಕಾರ ಮರುಸ್ಥಾಪಿಸಲಿದೆ ಎಂದು ಆದೇಶಲ್ಲಿ ತಿಳಿಸಲಾಗಿದೆ.
ಕಾನೂನು ಸುವ್ಯವಸ್ಥೆ ಸುಧಾರಣೆಗೊಂಡಿರುವ ಕಡೆಗಳಲ್ಲಿಯೂ ಇಂಟರ್ನೆಟ್ ಪುನಃಸ್ಥಾಪಿಸಲಾಗುವುದು ಎಂದು ಆದೇಶದಲ್ಲಿ ಹೇಳಲಾಗಿದೆ.
ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರವು 10 ಜಿಲ್ಲೆಗಳಲ್ಲಿ ವ್ಯಾಪಿಸಿದೆ.