ಭೋಪಾಲ್: ವಿಧಾನಸಭಾ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದ ಮಧ್ಯ ಪ್ರದೇಶ ಸರ್ಕಾರದ 55 ವರ್ಷದ ಉದ್ಯೋಗಿಯೊಬ್ಬರು ಗುರುವಾರ ರಾಜ್ಯದ ಬೆತುಲ್ ಪಟ್ಟಣದಲ್ಲಿ ಎದೆನೋವಿನಿಂದಾಗಿ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆ ಶುಕ್ರವಾರ ನಡೆಯಲಿದೆ.
ಬಾಲಕಿಯರ ಶಾಲೆಯ ಮತಗಟ್ಟೆ ಸಂಖ್ಯೆ 123ರಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಭೀಮರಾವ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಅವರು ಎಂಪಿ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ವಿಭಾಗದಲ್ಲಿ ವಾಚ್‌ಮನ್ ಆಗಿ ಕೆಲಸ ಮಾಡುತ್ತಿದ್ದರು ಎಂದು ಮುಲ್ತಾಯಿ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ತೃಪ್ತಿ ಪಟೇರಿಯಾ ಸುದ್ದಿಗಾರರಿಗೆ ತಿಳಿಸಿದರು.
ಸಂತ್ರಸ್ತರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ವೇಳೆ ಅವರು ಮೃತಪಟ್ಟಿದ್ದಾರೆ. ಮೃತರ ಕುಟುಂಬದ ಸದಸ್ಯರಿಗೆ ಅವರ ನಿಧನದ ಬಗ್ಗೆ ತಿಳಿಸಲಾಗಿದೆ ಎಂದು ಎಸ್‌ಡಿಎಂ ತಿಳಿಸಿದ್ದಾರೆ.
ಶುಕ್ರವಾರ ಬೆಳಗ್ಗೆ 7 ಗಂಟೆಗೆ ಮಧ್ಯ ಪ್ರದೇಶದ ವಿಧಾನಸಭಾ ಚುನಾವಣೆಗೆ ಮತದಾನ ಆರಂಭವಾಗಲಿದೆ. ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ. ರಾಜ್ಯಾದ್ಯಂತ 64,523 ಮತಗಟ್ಟೆಗಳಿವೆ. ಈ ನಡುವೆ ಮಧ್ಯ ಪ್ರದೇಶದ ಮತಗಟ್ಟೆಗಳಿಗೆ ಚುನಾವಣಾ ಸಿಬ್ಬಂದಿ ಆಗಮಿಸಲಾರಂಭಿಸಿದ್ದಾರೆ.
ಈ ಸಿಬ್ಬಂದಿಯನ್ನು ಗ್ಲೋಬಲ್ ಪೊಸಿಷನಿಂಗ್ ಸಿಸ್ಟಮ್ (ಜಿಪಿಎಸ್) ನೊಂದಿಗೆ ಸಂಪರ್ಕಿಸಲಾಗಿದೆ ಮತ್ತು ಅವರ ಚಟುವಟಿಕೆಗಳನ್ನು ಮಧ್ಯ ಪ್ರದೇಶಧ ಮುಖ್ಯ ಚುನಾವಣಾಧಿಕಾರಿ ಕಚೇರಿ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.