ನವದೆಹಲಿ: ದ್ವೇಷದ ಭಾಷಣ ಮತ್ತು ಗುಂಪು ಹಿಂಸಾಚಾರ ತಡೆಯಲು ಕ್ರಮ ಕೈಗೊಳ್ಳದ ಕೇರಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.
ದ್ವೇಷದ ಭಾಷಣಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸದ ಕೇರಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಎಸ್‍ವಿ ಭಾಟಿಯಾ ಅವರನ್ನೊಳಗೊಂಡ ಪೀಠವು ದ್ವೇಷ ಭಾಷಣದ ವಿರುದ್ಧದ ಅರ್ಜಿಗಳ ವಿಚಾರಣೆ ನಡೆಸಲಿದೆ.
ದ್ವೇಷ ಭಾಷಣ ಮತ್ತು ಗುಂಪು ದಾಳಿ ತಡೆಯಲು ನೋಡಲ್ ಅಧಿಕಾರಿಗಳನ್ನು ನೇಮಿಸಿ ಕ್ರಮ ಕೈಗೊಳ್ಳುವಂತೆ ಹಾಗೂ ಕಾನೂನು ಪ್ರಕ್ರಿಯೆಯನ್ನು ಬಿಗಿಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ಈ ಹಿಂದೆ ಸೂಚಿಸಿತ್ತು. ಆದರೆ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ನಾಗಾಲ್ಯಾಂಡ್ ರಾಜ್ಯಗಳು ಈ ನಿರ್ದೇಶನಗಳನ್ನು ಜಾರಿಗೆ ತಂದಿಲ್ಲ ಎಂದು ಕೇಂದ್ರ ಸರ್ಕಾರವು ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದೆ.
ಇದನ್ನು ಆಧರಿಸಿ ಸುಪ್ರೀಂ ಕೋರ್ಟ್ ಈ ಬಗ್ಗೆ ಮತ್ತೆ ರಾಜ್ಯ ಸರ್ಕಾರವನ್ನು ಎಚ್ಚರಿಸಿದೆ. ನ್ಯಾಯಾಲಯದ ನಿರ್ದೇಶನಗಳ ಅನುಷ್ಠಾನವು ಇತರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರಗತಿಯಲ್ಲಿದೆ ಎಂದು ಕೇಂದ್ರ ಸ್ಪಷ್ಟಪಡಿಸಿದೆ, ಆದರೆ ಕೇರಳ ಸೇರಿದಂತೆ ರಾಜ್ಯಗಳು ಪತ್ರಗಳಿಗೆ ಪ್ರತಿಕ್ರಿಯಿಸಿಲ್ಲ.