ತಿರುವನಂತಪುರಂ: ಕೇರಳದ ಹಲವು ಪ್ರದೇಶಗಳಲ್ಲಿ ಗುರುವಾರವೂ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗುಡ್ಡಗಾಡು ಮತ್ತು ತಗ್ಗು ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ನಿರಂತರ ಮಳೆಯಿಂದ ಇಡುಕ್ಕಿ ಮತ್ತು ಪತ್ತನಂತಿಟ್ಟ ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ವರದಿಗಳನ್ನು ಉಲ್ಲೇಖಿಸಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ನದಿಗಳ ನೀರಿನ ಮಟ್ಟ ಏರಿಕೆ:
ಭಾರತೀಯ ಹವಾಮಾನ ಇಲಾಖೆ ರಾಜ್ಯದಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ 24 ಗಂಟೆಗಳಲ್ಲಿ 20 ಸೆಂ.ಮೀ ಗಿಂತ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ. ನಿರಂತರ ಮಳೆಯಿಂದಾಗಿ ಪತ್ತನಂತಿಟ್ಟದ ಪ್ರಮುಖ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಬರಿಮಲೆ ಯಾತ್ರಾರ್ಥಿಗಳ ಮೇಲೆ ನಿಗಾ:
ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶಬರಿಮಲೆ ಯಾತ್ರಾರ್ಥಿಗಳ ಭದ್ರತಾ ವ್ಯವಸ್ಥೆ ಬಗ್ಗೆ ನಿಗಾ ವಹಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಚಿವ ಕೆ.ರಾಧಾಕೃಷ್ಣನ್ ಸೂಚನೆ ನೀಡಿದ್ದಾರೆ.
ಆಸ್ತಿಪಾಸ್ತಿ ಹಾನಿ:
ಪತ್ತನಂತಿಟ್ಟ-ತಿರುವಳ್ಳ ಮತ್ತು ಪುನಲೂರು-ಮುವಾಟ್ಟುಪುಳ ರಸ್ತೆಗಳಲ್ಲಿ ಭಾರಿ ಪ್ರಮಾಣದ ನೀರು ನಿಂತಿದೆ. ತಿರುವಳ್ಳ ಮತ್ತು ಕೊನ್ನಿ ಭಾಗದಲ್ಲಿ ವ್ಯಾಪಕ ಕೃಷಿ ಮತ್ತು ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿದೆ. ಮರಗಳು ಧರೆಗುರುಳಿದ್ದು, ಕುಮಳಿ-ಮುನ್ನಾರ್ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ.
ಕಳೆದ 8 ಗಂಟೆಗಳಲ್ಲಿ ಕೇರಳದ 15 ಕಡೆಗಳಲ್ಲಿ 100 ಮಿ.ಮೀ.ಗೂ ಹೆಚ್ಚು ಮಳೆಯಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.