ಕೊಚ್ಚಿ: ಸಮುದಾಯಗಳ ನಡುವೆ ದ್ವೇಷ ಉತ್ತೇಜಿಸುವ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ಪ್ರಕರಣವು ಸೇರಿದಂತೆ ಎರಡು ಪ್ರಕಣಗಳಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಡಿಸೆಂಬರ್ 14ರವರೆಗೆ ಯಾವುದೇ ಬಲವಂತದ ಕ್ರಮಕೈಗೊಳ್ಳಬಾರದು ಎಂದು ಕೇರಳ ಹೈಕೋರ್ಟ್ ಬುಧವಾರ ಪೊಲೀಸರಿಗೆ ನಿರ್ದೇಶನ ನೀಡಿದೆ.
ಕೊಚ್ಚಿಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷ ಹರಡುವ ಪೋಸ್ಟ್ ಮಾಡಿದ್ದಾರೆ ಎಂಬ ಆರೋಪದಲ್ಲಿ ಸಚಿವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.
ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸಬೇಕೆಂದು ಕೋರಿ ರಾಜೀವ್ ಚಂದ್ರಶೇಖರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿ.ಎಸ್. ಡಯಾಸ್ ಅವರು, ಈ ಬಗ್ಗೆ ನಿಲುವು ಪ್ರಕಟಿಸುವಂತೆ ಸರ್ಕಾರಕ್ಕೆ ನೋಟಿಸ್ ನೀಡಿದ್ದಾರೆ.
ದೂರುದಾರರಾದ ಕೆಪಿಸಿಸಿ ಡಿಜಿಟಲ್ ಮಾಧ್ಯಮ ಸಂಚಾಲಕ ಪಿ. ಸರಿನ್ ಅವರಿಗೂ ನಿಲುವು ಪ್ರಕಟಿಸುವಂತೆ ನ್ಯಾಯಾಲಯವು ನೋಟಿಸ್ ನೀಡಿದೆ.
'ಕಾಂಗ್ರೆಸ್ ಮತ್ತು ಸಿಪಿಎಂನ ಓಲೈಕೆಯ ರಾಜಕಾರಣದಿಂದಾಗಿ ವಿಧ್ವಂಸಕ ಕೃತ್ಯಗಳು ನಡೆಯುತ್ತವೆ ಮತ್ತು ಅದಕ್ಕೆ ಮುಗ್ಧ ಜನರು ಬೆಲೆ ತೆರಬೇಕಾಗುತ್ತದೆ' ಎಂದು ರಾಜೀವ್ ಚಂದ್ರಶೇಖರ್ ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದರು.