ಉಪ್ಪಳ: ಮಂಗಲ್ಪಾಡಿ ತಾಲೂಕು ಆಸ್ಪತ್ರೆಗೆ ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ವೀಣಾ ಜಾರ್ಜ್ ಗುರುವಾರ ಭೇಟಿ ನೀಡಿದರು. ಸಚಿವರು ಆಸ್ಪತ್ರೆಯ ವಿವಿಧ ವಿಭಾಗಗಳು ಮತ್ತು ಘಟಕಗಳಿಗೆ ಭೇಟಿ ನೀಡಿ ಅವಲೋಕನ ನಡೆಸಿದರು. ರೋಗಿಗಳು ಹಾಗೂ ನೌಕರರ ಅಹವಾಲು ಆಲಿಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಆಸ್ಪತ್ರೆಯ ಕಾರ್ಯನಿರ್ವಹಣೆಗೆ ಅಗತ್ಯವಿರುವ ನೀರಿನ ಕೊರತೆಯ ಕುರಿತು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದ್ದು, ಕೂಡಲೇ ಜಲಸಂಪನ್ಮೂಲ ಸಚಿವ ರೋಶಿ ಆಗಸ್ಟಿನ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಸಮಸ್ಯೆ ಬಗೆಹರಿಸಲು ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು. ವೈದ್ಯರ ಕೊರತೆಯಿಂದ ಆಗುತ್ತಿರುವ ಸಮಸ್ಯೆಗಳನ್ನೂ ಶೀಘ್ರ ಪರಿಹರಿಸಲಾಗುವುದು ಎಂದು ಸಚಿವರು ತಿಳಿಸಿದರು. ಡಯಾಲಿಸಿಸ್ ರೋಗಿಗಳ ಸಂಖ್ಯೆಯನ್ನು ಪರಿಗಣಿಸಿ ಹೊಸ ಕಟ್ಟಡ ಮತ್ತು ಯಂತ್ರಗಳನ್ನು ಮಂಜೂರು ಮಾಡಲಾಗುವುದು. ರಾತ್ರಿ ತಪಾಸಣೆಗೆ ಹೆಚ್ಚಿನ ವೈದ್ಯರನ್ನು ನಿಯೋಜಿಸಲಾಗುವುದು. ತಾಲೂಕು ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶೀಘ್ರ ಚಾಲನೆ ನೀಡಲಾಗುವುದು ಎಂದು ಸಚಿವರು ತಿಳಿಸಿದರು.
ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್, ಡಿ.ಎಚ್.ಎಸ್. ಡಾ.ಕೆ.ಜೆ.ರೀನಾ, ಡಿ.ಎಂ.ಒ. (ಆರೋಗ್ಯ) ಡಾ.ಎ.ವಿ.ರಾಮದಾಸ್, ಡಿಪಿಎಂ ಅನಿಲ್ ಮತ್ತು ಡಾ.ಪ್ರಸಾದ್ ಸಚಿವರ ಜೊತೆಗಿದ್ದರು.