ರಾಯಪುರ: ಛತ್ತೀಸಗಢದ ನೂತನ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರ ಪ್ರಮಾಣ ವಚನ ಸ್ವೀಕಾರವು ಐತಿಹಾಸಿಕ ಸಮಾರಂಭ ಆಗಿರಲಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಪಕ್ಷದ ನಾಯಕರು ಮತ್ತು ಮುಖ್ಯಮಂತ್ರಿಗಳು ಸಮಾರಂಭದಲ್ಲಿ ಪಾಲ್ಗೊಳ್ಳುವರು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಅರುಣ್ ಸಾವ್ ಹೇಳಿದ್ದಾರೆ.
ಬುಧವಾರ ಮಧ್ಯಾಹ್ನ 2 ಗಂಟೆಗೆ ರಾಯಪುರದ ವಿಜ್ಞಾನ ಕಾಲೇಜಿನ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 50,000ಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳಲಿದ್ದಾರೆ.
'ಚುನಾವಣೆಯಲ್ಲಿ ಬಿಜೆಪಿ ಗೆಲುವು ಐತಿಹಾಸಿಕವಾಗಿದ್ದಂತೆಯೇ, ಪ್ರಮಾಣ ವಚನ ಸಮಾರಂಭವೂ ಐತಿಹಾಸಿಕ ಆಗಿರಲಿದೆ' ಎಂದು ಅರುಣ್ ಅವರು ವರದಿಗಾರರಿಗೆ ತಿಳಿಸಿದರು.
'ಎಷ್ಟು ಮಂದಿ ಪ್ರಮಾಣ ವಚನ ಸ್ವೀಕರಿಸುವರು ಎಂಬುದನ್ನು ಸೂಕ್ತ ಸಮಯದಲ್ಲಿ ತಿಳಿಸಲಾಗುವುದು' ಎಂದು ಹೇಳಿದರು.