ಡೆಹ್ರಾಡೂನ್: ರಾಜ್ಯದಲ್ಲಿ ಜಾರಿಗೆ ತರಲು ಉದ್ದೇಶಿಸಲಾಗಿರುವ ಏಕರೂಪ ನಾಗರಿಕ ಸಂಹಿತೆಯ (ಯುಸಿಸಿ) ಕರಡು ರಚನಾ ಸಮಿತಿ ಈವರೆಗೆ ತೆಗೆದುಕೊಂಡ ನಿರ್ಧಾರಗಳನ್ನು ಉತ್ತರಾಖಂಡ ಸರ್ಕಾರ ಅನುಮೋದಿಸಿದೆ.
ಶುಕ್ರವಾರ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್.ಎಸ್ ಸಂಧು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರಂಜನ ಪ್ರಕಾಶ್ ದೇಸಾಯಿ ಅವರ ನೇತೃತ್ವದಲ್ಲಿ 2022ರಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಜನವರಿಯಲ್ಲಿ ಕರಡು ಸಲ್ಲಿಸುವ ಸಾಧ್ಯತೆ ಇದೆ. ಬಳಿಕ ಅದನ್ನು ಜಾರಿಗೆ ತರುವ ಪ್ರಕ್ರಿಯೆ ಆರಂಭವಾಗಲಿದೆ.
ಇದೇ ವೇಳೆ ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್‌ದಾರರಿಗೆ ₹8ಕ್ಕೆ ಮಾಸಿಕ 1 ಕೆ.ಜಿ ಅಯೊಡಿನ್‌ಯುಕ್ತ ಉಪ್ಪು ನೀಡುವುದು ಸೇರಿ ಹಲವು ತೀರ್ಮಾನಗಳಿಗೆ ಸಂಪುಟ ಅನುಮೋದನೆ ನೀಡಿದೆ.