ಜೈಪುರ: ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್‌ಲಾಲ್ ಶರ್ಮಾ ಅವರು ಆಯ್ಕೆಯಾಗಿದ್ದಾರೆ.
ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ಸಾಂಗಾನೆರೆ ಕೇತ್ರದಿಂದ ಮೊದಲ ಬಾರಿಗೆ ಆಯ್ಕೆಯಾಗಿರುವ ಶಾಸಕ ಭಜನ್‌ಲಾಲ್ ಶರ್ಮಾ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದೆ.
ರಕ್ಷಣಾ ಸಚಿವ ಹಾಗೂ ಪಕ್ಷದ ಕೇಂದ್ರ ವೀಕ್ಷಕರಾದ ರಾಜನಾಥ್ ಸಿಂಗ್, ರಾಷ್ಟ್ರೀಯ ಉಪಾಧ್ಯಕ್ಷ ಸರೋಜ್ ಪಾಂಡೆ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗಿದೆ.
ಹೊಸದಾಗಿ ಆಯ್ಕೆಯಾಗಿರುವ ಎಲ್ಲ ಶಾಸಕರಿಗೂ ಕಡ್ಡಾಯವಾಗಿ ಸಭೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು.
ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ, ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೆಘವಾಲ್, ಗಜೇಂದ್ರ ಸಿಂಗ್ ಶೇಖಾವತ್, ಅಶ್ವಿನಿ ವೈಷ್ಣವ್ ಸಿಎಂ ಗಾದಿ ರೇಸ್‌ನಲ್ಲಿದ್ದರು.
200 ಸದಸ್ಯ ಬಲದ ರಾಜಸ್ಥಾನದ ವಿಧಾನಸಭೆಯ 199 ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 115 ಕಡೆ ಗೆಲುವು ಸಾಧಿಸಿ, ಸರ್ಕಾರ ರಚಿಸಲು ಬಹುಮತ ಪಡೆದುಕೊಂಡಿತ್ತು.
ಶ್ರೀಗಂಗಾನಗರದ ಕರಣಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ, ಹಾಲಿ ಶಾಸಕ ಗುರ್ಮೀತ್ ಸಿಂಗ್ ಕೂನಾರ್ ನಿಧನದಿಂದಾಗಿ ಈ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿತ್ತು.