ಲಖನೌ: ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆಗೆ ಸಿದ್ಧತೆಗಳು ಭರದಿಂದ ಸಾಗಿದ್ದು, ಈ ನಡುವಲ್ಲೇ ಭಯೋತ್ಪಾದಕ ನಿಗ್ರಹ ದಳ ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ಬಂಧನಕ್ಕೊಳಪಡಿಸಿದೆ ಎಂದು ಶುಕ್ರವಾರ ತಿಳಿದುಬಂದಿದೆ.
ಉತ್ತರ ಪ್ರದೇಶದ ವಿಶೇಷ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಅವರು ಮಾತನಾಡಿ, ಅಯೋಧ್ಯೆ ಜಿಲ್ಲೆಯಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳವು ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದಿದೆ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯ ಸರ್ಕಾರ ಮತ್ತು ಪೊಲೀಸ್ ಪ್ರಧಾನ ಕಚೇರಿಯ ಸೂಚನೆಯ ಮೇರೆಗೆ ನಡೆಸುತ್ತಿರುವ ತಪಾಸಣೆ ಅಭಿಯಾನದ ಭಾಗವಾಗಿ, ಅಯೋಧ್ಯೆ ಜಿಲ್ಲೆಯ ಯುಪಿ-ಎಟಿಎಸ್‌ನಿಂದ ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ಬಂಧಿಸಲಾಗಿದೆ. ಈ ಶಂಕಿತರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇಲ್ಲಿಯವರೆಗೆ ಯಾವುದೇ ಭಯೋತ್ಪಾದಕ ಸಂಘಟನೆಯೊಂದಿಗೆ ಅವರ ಸಂಪರ್ಕ ಬೆಳಕಿಗೆ ಬಂದಿಲ್ಲ ಎನ್ನಲಾಗಿದೆ.
ಶ್ರೀರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಉತ್ತರಪ್ರದೇಶ ಸರ್ಕಾರ ಭದ್ರತೆಯನ್ನು ಹೆಚ್ಚಿಸಿದೆ. ಡ್ರೋಣ್ ಗಳ ಮೂಲಕ ಕಣ್ಗಾವಲು ಹೆಚ್ಚಿಸಿದ್ದು, ನಗರದಲ್ಲಿ ಭದ್ರತೆಯನ್ನು ಬಿಗಿಗೊಳಿಸಿದೆ.