ಮುಂಬೈ; ಇತ್ತೀಚಿಗೆ ನಡೆದ ಪಂಚರಾಜ್ಯ ಚುನಾವಣೆಗಳ ಪೈಕಿ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಲು ಮಹಿಳೆಯರು ವ್ಯಕ್ತಪಡಿಸಿದ ಅಪಾರ ಬೆಂಬಲ ಕಾರಣವಾಗಿದೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಗುರುವಾರ ಹೇಳಿದ್ದಾರೆ.
ಮುಂಬೈನಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮಹಿಳಾ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ಮುಂಬರುವ ವರ್ಷಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಶಾಸಕರು ಹಾಗೂ ಸಂಸದರನ್ನು ವಿಧಾನಸಭೆ ಹಾಗೂ ಸಂಸತ್ತಿನಲ್ಲಿ ಕಾಣಬಹುದು ಎಂದು ತಿಳಿಸಿದ್ದಾರೆ.
ಈ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಮೋದಿ ಅವರು ಮತ್ತೆ ಅಧಿಕಾರಕ್ಕೆ ಬರಲು ಪಂಚರಾಜ್ಯ ಚುನಾವಣೆ ದಿಕ್ಸೂಚಿಯಂತೆ ಕಾಣುತ್ತದೆ. ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸಗಢದಲ್ಲಿ ಬಿಜೆಪಿ ಅದ್ಭುತ ಗೆಲುವನ್ನು ಸಾಧಿಸಿದ್ದು, ಕಾಂಗ್ರೆಸ್‌ಗೆ ಭಾರಿ ಮುಖಭಂಗವಾಗಿದೆ ಎಂದು ಹೇಳಿದ್ದಾರೆ.
ಮಹಾರಾಷ್ಟ್ರದ ಅಭಿವೃದ್ಧಿಗಾಗಿ ಯೋಜನೆಗಳ ಕಾರ್ಯಸೂಚಿ ಸಿದ್ಧಪಡಿಸಿದ್ದೇವೆ. ಹಾಗೂ ಅದೇ ಪ್ರಕಾರವಾಗಿ ಕೆಲಸ ಮಾಡುತ್ತಿದ್ದೇವೆ. ಎನ್‌ಸಿಪಿ ಯಾವಾಗಲೂ ಮಹಿಳೆಯರನ್ನು ಗೌರವಿಸುತ್ತದೆ ಎಂದು ಅಜಿತ್ ಪವಾರ್ ಹೇಳಿದ್ದಾರೆ.