ನವದೆಹಲಿ: ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರು ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ. ಆದರೆ ದೆಹಲಿಯ ಝಾಂಡೇವಾಲನ್ ದೇವಸ್ಥಾನದಲ್ಲಿ ಐತಿಹಾಸಿಕ ಘಟನೆಯನ್ನು ವೀಕ್ಷಿಸಲಿದ್ದಾರೆ.
ಈ ಕುರಿತು ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜೆಪಿ ನಡ್ಡಾ ಅವರು, ಜನವರಿ 22 ರ "ಪ್ರಾಣ ಪ್ರತಿಷ್ಠಾಪನೆ" ಕಾರ್ಯಕ್ರಮಕ್ಕೆ ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ದೇವಾಲಯದ ನಿರ್ಮಾಣ ಮತ್ತು ನಿರ್ವಹಣೆಯ ಉಸ್ತುವಾರಿ ವಹಿಸಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಧನ್ಯವಾದ ತಿಳಿಸಿದ್ದಾರೆ.
500 ವರ್ಷಗಳ ಹೋರಾಟದ ನಂತರ ಭವ್ಯ ಮಂದಿರ ನಿರ್ಮಾಣವಾಗುತ್ತಿದ್ದು, ಜನವರಿ 22ರ ನಂತರ ಕುಟುಂಬ ಸಮೇತ ಅಯೋಧ್ಯೆಗೆ ಭೇಟಿ ನೀಡಿ ದರ್ಶನ ಪಡೆಯುವುದಾಗಿ ನಡ್ಡಾ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆಯುತ್ತಿರುವ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಆಹ್ವಾನಿಸಲಾಗಿದೆ.