ನವದೆಹಲಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಕಡಿಮೆ. ಹೀಗಾಗಿ, ಅವರನ್ನು ಕರ್ನಾಟಕ ಇಲ್ಲವೆ ಹಿಮಾಚಲ ಪ್ರದೇಶದಿಂದ ರಾಜ್ಯಸಭಾ ಚುನಾವಣೆಯಲ್ಲಿ ಕಣಕ್ಕೆ ಇಳಿಸುವ ಕುರಿತು ಹೈಕಮಾಂಡ್ ಮಟ್ಟದಲ್ಲಿ ಈಗಾಗಲೇ ಚರ್ಚೆಗಳು ನಡೆದಿವೆ ಎಂದು ಮೂಲಗಳು ತಿಳಿಸಿವೆ.
ಹಿಮಾಚಲ ಪ್ರದೇಶದಿಂದ ರಾಜ್ಯಸಭೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆಯ್ಕೆಯಾಗಿದ್ದಾರೆ. ಅವರ ಅವಧಿ ಏಪ್ರಿಲ್‌ನಲ್ಲಿ ಮುಗಿಯಲಿದೆ. ವಿಧಾನಸಭೆಯ ಬಲಾಬಲದ ಆಧಾರದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಹೆಚ್ಚು. ಹಾಗಾಗಿ, ನಡ್ಡಾ ಅವರು ಬೇರೆ ರಾಜ್ಯದಿಂದ ಸ್ಪರ್ಧಿಸುವ ಸಂಭವ ಇದೆ.
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರಿಗೆ ಬಿಜೆಪಿಯ ವರಿಷ್ಠರು ಸಲಹೆ ನೀಡಿದ್ದಾರೆ. ಅವರನ್ನು ಕೇರಳದಿಂದ ಕಣಕ್ಕೆ ಇಳಿಸಲು ವರಿಷ್ಠರು ಉತ್ಸುಕರಾಗಿದ್ದಾರೆ. ತಮ್ಮ ನಿಲುವು ತಿಳಿಸಲು ರಾಜೀವ್ ಅವರು ಕಾಲಾವಕಾಶ ಕೇಳಿದ್ದಾರೆ. ರಾಜೀವ್ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದರೆ ರಾಜ್ಯಸಭೆ ಚುನಾವಣೆಯಲ್ಲಿ ಬೇರೆಯವರಿಗೆ ಅವಕಾಶ ಲಭಿಸಬಹುದು. ತಮ್ಮನ್ನು ರಾಜ್ಯಸಭಾ ಅಭ್ಯರ್ಥಿಯನ್ನಾಗಿ ಮಾಡುವಂತೆ ಮಾಜಿ ಸಚಿವ ವಿ.ಸೋಮಣ್ಣ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಮನವಿ ಮಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಷ್ಟದ ಮೂರು ಕ್ಷೇತ್ರಗಳನ್ನು ಗೆಲ್ಲಿಸಿಕೊಂಡು ಬರುವುದಾಗಿಯೂ ಸೋಮಣ್ಣ ಅವರು ವರಿಷ್ಠರಿಗೆ ತಿಳಿಸಿದ್ದಾರೆ.
ಎನ್‌ಡಿಎ ಬಲ ಹೆಚ್ಚಳ:
ರಾಜ್ಯಸಭೆಯಲ್ಲಿ ಸದ್ಯ ಎನ್‌ಡಿಎ ಮೈತ್ರಿಕೂಟದ 114 ಸದಸ್ಯರು ಇದ್ದಾರೆ. ಇದರಲ್ಲಿ ಬಿಜೆಪಿ ಸದಸ್ಯರ ಸಂಖ್ಯೆ 93. ಕಮಲ ಪಾಳಯದ 28 ಸದಸ್ಯರು ಏಪ್ರಿಲ್‌ನಲ್ಲಿ ನಿವೃತ್ತರಾಗುತ್ತಿದ್ದಾರೆ. ಚುನಾವಣೆಯಲ್ಲಿ ಈ ಎಲ್ಲ ಸ್ಥಾನಗಳನ್ನು ಬಿಜೆಪಿ ಉಳಿಸಿಕೊಳ್ಳುವ ಸಾಧ್ಯತೆ ಇದೆ. ಜೆಡಿಯು ಹಾಗೂ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣ ಮೈತ್ರಿಕೂಟಕ್ಕೆ ಸೇರ್ಪಡೆ ಆಗಿರುವುದರಿಂದ ಎನ್‌ಡಿಎ ಹೆಚ್ಚುವರಿಯಾಗಿ ಆರು ಸ್ಥಾನಗಳನ್ನು ಗೆಲ್ಲಲಿದೆ ಎಂದು ಲೆಕ್ಕಾಚಾರ ಹಾಕಲಾಗಿದೆ. ಆಗ ಎನ್‌ಡಿಎ ಸದಸ್ಯರ ಸಂಖ್ಯೆ 120ಕ್ಕೆ ಏರಲಿದೆ.