ನವದೆಹಲಿ: ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಪೆನ್ನಾರ್ (ದಕ್ಷಿಣ ಪಿನಾಕಿನಿ) ನದಿ ನೀರು ಹಂಚಿಕೆಗೆ ಸಂಬಂಧಿಸಿದ ವಿವಾದಗಳನ್ನು ಬಗೆಹರಿಸಲು ಎರಡು ವಾರಗಳಲ್ಲಿ ಹೊಸ ಸಂಧಾನ ಸಮಿತಿಯನ್ನು ರಚಿಸುವಂತೆ ಕೇಂದ್ರ ಜಲಶಕ್ತಿ ಸಚಿವಾಲಯಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.

ಜಲವಿವಾದದ ವಿಚಾರಣೆ ನಡೆಸಿದ ನ್ಯಾಯಪೀಠ, 'ಸಮಿತಿಯು ಮೂರು ತಿಂಗಳಲ್ಲಿ ವರದಿ ಸಲ್ಲಿಸಬೇಕು' ಎಂದು ಸೂಚಿಸಿದೆ.
ವಿವಾದ ಬಗೆಹರಿಸಲು 'ದಕ್ಷಿಣ ಪಿನಾಕಿನಿ ಜಲವಿವಾದ ನ್ಯಾಯಮಂಡಳಿ' ರಚಿಸುವ ಕೇಂದ್ರ ಸರ್ಕಾರದ ಪ್ರಸ್ತಾವಕ್ಕೆ ಕರ್ನಾಟಕ ಸರ್ಕಾರ ವಿರೋಧ ವ್ಯಕ್ತಪಡಿಸಿತ್ತು. ಮಾತುಕತೆಯ ಮೂಲಕ ಈ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಸರ್ಕಾರವು ಜಲಶಕ್ತಿ ಸಚಿವಾಲಯಕ್ಕೆ ಪತ್ರ ಬರೆದಿತ್ತು.
ದಕ್ಷಿಣ ಪಿನಾಕಿನಿ ನದಿಯ ಕಣಿವೆಯಲ್ಲಿ ಕರ್ನಾಟಕ ಸರ್ಕಾರವು ಮಾರ್ಕಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟೆ ನಿರ್ಮಿಸಿದೆ. ಬೆಂಗಳೂರಿನ ಎಲೆ ಮಲ್ಲಪ್ಪ ಚೆಟ್ಟಿ ಕೆರೆಯಿಂದ ಹೊಸಕೋಟೆಯವರೆಗೆ ನೀರು ಹರಿಸುವ ಕಾಮಗಾರಿ, ಬ್ಯಾಲಹಳ್ಳಿ ಗ್ರಾಮದ ಹತ್ತಿರ ಪೆನ್ನಾರ್ ನದಿಯಿಂದ ನೀರು ಹರಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ. ಈ ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
'ಈ ವಿವಾದವನ್ನು ಮಾತುಕತೆ ಮೂಲಕ ಇತ್ಯರ್ಥಪಡಿಸಲು ಸಂಧಾನ ಸಮಿತಿಯನ್ನು ರಚಿಸಲಾಗಿದೆ. ನ್ಯಾಯಾಧೀಕರಣ ರಚಿಸಲು ಸಮಿತಿಯು ತಾತ್ವಿಕ ಅನುಮೋದನೆ ನೀಡಿದೆ' ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಈ ಹಿಂದೆ ತಿಳಿಸಿತ್ತು.