ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ರಾಷ್ಟ್ರ ರಾಜಧಾನಿಯಲ್ಲಿ ಜಮ್ಮು ಮತ್ತು ಕಾಶ್ಮೀರ ಭದ್ರತೆ ಕುರಿತು ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸುವ ಸಾಧ್ಯತೆಯಿದೆ.
ಸಭೆಯಲ್ಲಿ ಕಣಿವೆಯ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಮತ್ತು ಭದ್ರತಾ ಗ್ರಿಡ್ ಹಾಗೂ ಶೂನ್ಯ ಭಯೋತ್ಪಾದನಾ ಯೋಜನೆಯಂತಹ ವಿಷಯಗಳ ಕುರಿತು ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಮಧ್ಯಾಹ್ನ ನಡೆಯಲಿರುವ ಸಭೆಯಲ್ಲಿ, ಗೃಹ ಸಚಿವರು, ಭದ್ರತಾ ಗ್ರಿಡ್‌ನ ಕಾರ್ಯನಿರ್ವಹಣೆ ಮತ್ತು ಭದ್ರತೆಗೆ ಸಂಬಂಧಿಸಿದ ವಿವಿಧ ಅಂಶಗಳನ್ನು ಹಾಗೂ ಕೇಂದ್ರಾಡಳಿತ ಪ್ರದೇಶದ ಅಭಿವೃದ್ಧಿಗೆ ಸಂಬಂಧಿಸಿದ ಉಪಕ್ರಮಗಳನ್ನು ಪರಿಶೀಲಿಸಲಿದ್ದಾರೆ.
ಪ್ರದೇಶ ಪ್ರಾಬಲ್ಯ ಯೋಜನೆ, ಶೂನ್ಯ ಭಯೋತ್ಪಾದನಾ ಯೋಜನೆ, ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ, ಯುಎಪಿಎಗೆ ಸಂಬಂಧಿಸಿದ ಪ್ರಕರಣಗಳು ಮತ್ತು ಇತರ ಭದ್ರತೆಗೆ ಸಂಬಂಧಿಸಿದ ವಿಷಯಗಳನ್ನು ಗೃಹ ಸಚಿವರು ಪರಿಶೀಲಿಸಲಿದ್ದಾರೆ ಎಂದು ತಿಳಿದುಬಂದಿದೆ.
ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಮುಖ್ಯ ಕಾರ್ಯದರ್ಶಿ ಅಟಲ್ ಡುಲ್ಲೋ ಮತ್ತು ಪೊಲೀಸ್ ಮಹಾನಿರ್ದೇಶಕ ಆರ್ ಆರ್ ಸ್ವೈನ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ಇಂಟೆಲಿಜೆನ್ಸ್ ಬ್ಯೂರೋ ನಿರ್ದೇಶಕ ತಪನ್ ದೇಕಾ, ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ಗಡಿ ಭದ್ರತಾ ಪಡೆಗಳ ಪೊಲೀಸ್ ಮಹಾನಿರ್ದೇಶಕರು ಹಾಗೂ ಗೃಹ ಸಚಿವಾಲಯದ ಸಂಬಂಧಪಟ್ಟ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.