ತಿರುವನಂತಪುರ: ಹೊಸ ಪಿಂಚಣಿ ಯೋಜನೆಯ (ಎನ್‌ಪಿಎಸ್) ಕುರಿತು ಅವಲೋಕನ ನಡೆಸಿ, ನೌಕರರ ಹಿತದೃಷ್ಟಿಯಿಂದ ಪರಿಷ್ಕೃತ ಯೋಜನೆಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸಿದೆ ಎಂದು ಕೇರಳದ ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ ಸೋಮವಾರ ತಿಳಿಸಿದರು.
ಪರಿಷ್ಕೃತ ಯೋಜನೆಯು ವಿಶ್ವಾಸಾರ್ಹ ಪಿಂಚಣಿ ವ್ಯವಸ್ಥೆಯನ್ನು ಹೊಂದಿರಲಿದೆ ಎಂದು ಅವರು ಕೇರಳ ವಿಧಾನಸಭೆಯಲ್ಲಿ 2024-25ನೇ ಸಾಲಿನ ಬಜೆಟ್ ಮಂಡಿಸಿ ಹೇಳಿದರು.
ರಾಜ್ಯ ಸರ್ಕಾರವು ಹಣಕಾಸಿನ ಮುಗ್ಗಟ್ಟು ಎದುರಿಸುತ್ತಿರುವುದರಿಂದ ಮದ್ಯದ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಳ ಮಾಡಿರುವುದಾಗಿ ತಿಳಿಸಿದರು.
ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳ ಕ್ಯಾಂಪಸ್‌ಗಳನ್ನು ರಾಜ್ಯದಲ್ಲಿ ಆರಂಭಿಸಲು ಅನುವು ಮಾಡಿಕೊಡುವುದಾಗಿಯೂ ಅವರು ಬಜೆಟ್‌ನಲ್ಲಿ ಘೋಷಿಸಿದ್ದಾರೆ.
ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಖಾಸಗಿ ಮತ್ತು ವಿದೇಶಿ ಹೂಡಿಕೆಯನ್ನು ಹಿಂದಿನಿಂದಲೂ ಸಿಪಿಎಂ ನೇತೃತ್ವದ ಎಲ್‌ಡಿಎಫ್ ಸರ್ಕಾರವು ವಿರೋಧಿಸುತ್ತಾ ಬಂದಿದೆ, ಆದರೆ ಈ ಬಾರಿ ತನ್ನ ನಿಲುವನ್ನು ಸಡಿಲಿಸಿ ವಿದೇಶಿ ವಿಶ್ವವಿದ್ಯಾಲಯಗಳನ್ನು ಸ್ವಾಗತಿಸಿದೆ.