ನವದೆಹಲಿ: ಅಬಕಾರಿ ನೀತಿ ಪರಿಷ್ಕರಣೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ಗುರುವಾರ ನಿರಾಕರಿಸಿದ್ದು ಇದರ ಬೆನ್ನಲ್ಲೇ ಇಡಿ ಅಧಿಕಾರಿಗಳ ತಂಡ ದೆಹಲಿ ಮುಖ್ಯಮಂತ್ರಿ ನಿವಾಸಕ್ಕೆ ತೆರಳಿ ಮತ್ತೊಂದು ಸಮನ್ಸ್ ಜಾರಿ ಮಾಡಿ, ವಿಚಾರಣೆ ನಡೆಸಿ ಇದೀಗ ಬಂಧಿಸಿದೆ.
ಇಡಿ ಅಧಿಕಾರಿಗಳ ತಂಡ ದೆಹಲಿ ಸಿಎಂ ನಿವಾಸಕ್ಕೆ ಆಗಮಿಸಿದ ಕಾರಣ, ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ ಮತ್ತು ಸಿವಿಲ್ ಲೈನ್ಸ್‌ನಲ್ಲಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಬಳಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ. ಬ್ಯಾರಿಕೇಡ್‌ಗಳನ್ನು ಹಾಕಲಾಗಿದ್ದು, ಸಹಾಯಕ ಪೊಲೀಸ್ ಆಯುಕ್ತರ ಶ್ರೇಣಿಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
ದೆಹಲಿ ಸಿಎಂ ನಿವಾಸದ ಬಳಿ ಮತ್ತು ಇಡಿ ಕಚೇರಿ ಬಳಿ ದೆಹಲಿ ಪೊಲೀಸ್ ಸಿಬ್ಬಂದಿಯೊಂದಿಗೆ RAF ಮತ್ತು CRPF ಪಡೆಗಳನ್ನು ನಿಯೋಜಿಸಲಾಗಿದೆ. ಸಿಎಂ ನಿವಾಸದ ಬಳಿ ಮತ್ತು ಇಡಿ ಕಚೇರಿ ಬಳಿ ಎಎಪಿ ಕಾರ್ಯಕರ್ತರು ಸೇರುವ ನಿರೀಕ್ಷೆ ಇರುವು ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಡಿ ಹೆಚ್ಚುವರಿ ಭದ್ರತಾ ಕ್ರಮಗಳನ್ನು ಕೋರಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಮಧ್ಯೆ ಎಎಪಿ ಕಾರ್ಯಕರ್ತರು ಅರವಿಂದ್ ಕೇಜ್ರಿವಾಲ್ ನಿವಾಸದ ಎದರು ಪ್ರತಿಭಟನೆ ನಡೆಸುತ್ತಿದ್ದು ಕೇಂದ್ರ ಸರ್ಕಾರ ಹಾಗೂ ಇಡಿ ಅಧಿಕಾರಿಗಳ ವಿರುದ್ಧ ಪ್ರತಿಭಟಿಸುತ್ತಿದ್ದಾರೆ.