ನವದೆಹಲಿ: ಮುಖ್ಯಮಂತ್ರಿ ಏಕನಾಥ ಶಿಂದೆ ಹಾಗೂ ಅವರ ಬಣದ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಶಿವಸೇನಾದ ಉದ್ಧವ್ ಠಾಕ್ರೆ ಬಣ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ಮಹಾರಾಷ್ಟ್ರ ವಿಧಾನಸಭಾಧ್ಯಕ್ಷ ರಾಹುಲ್ ನಾರ್ವೇಕರ್ ಅವರ ಕಚೇರಿಯಲ್ಲಿರುವ ಮೂಲ ದಾಖಲೆಗಳನ್ನು ಹಾಜರುಪಡಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದೆ.
ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಹಾಗೂ ಮನೋಜ್ ಮಿಶ್ರಾ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ಈ ವಿಷಯಕ್ಕೆ ಸಂಬಂಧಿಸಿದ ಉದ್ಧವ್ ಠಾಕ್ರೆ ಬಣ ನಕಲಿ ದಾಖಲೆಗಳನ್ನು ಸಲ್ಲಿಸಿದೆ ಎಂದು ಆರೋಪಿಸಿ, ಶಿಂದೆ ಬಣ ಅರ್ಜಿ ಸಲ್ಲಿಸಿತ್ತು.
ಮುಖ್ಯಮಂತ್ರಿ ಶಿಂದೆ ನೇತೃತ್ವದ ಬಣವೇ 'ನೈಜ ರಾಜಕೀಯ ಪಕ್ಷ' ಎಂದು ಘೋಷಿಸಿ, ವಿಧಾನಸಭಾಧ್ಯಕ್ಷ ರಾಹುಲ್ ನಾರ್ವೇಕರ್ ಜ.10ರಂದು ಆದೇಶ ಹೊರಡಿಸಿದ್ದರು. ಆಡಳಿತಾರೂಢ ಬಣದ 16 ಶಾಸಕರನ್ನು ಅನರ್ಹಗೊಳಿಸುವಂತೆ ಉದ್ಧವ್ ಬಣ ಸಲ್ಲಿಸಿದ್ದ ಅರ್ಜಿಯನ್ನೂ ಅವರು ತಿರಸ್ಕರಿಸಿದ್ದರು.
ಅಲ್ಲದೇ, ಇದೇ ವಿಷಯಕ್ಕೆ ಸಂಬಂಧಿಸಿ ಠಾಕ್ರೆ ಬಣ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿ ಏಪ್ರಿಲ್ 1ರ ಒಳಗಾಗಿ ಪ್ರತಿಕ್ರಿಯೆ ಸಲ್ಲಿಸುವಂತೆ ಶಿಂದೆ ಬಣಕ್ಕೆ ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಏಪ್ರಿಲ್ 8ಕ್ಕೆ ಮುಂದೂಡಿದೆ.