ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 21 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿರುವ ಬಿಜೆಪಿ ಧೋರಣೆಗೆ ಜೆಡಿಎಸ್ ನಾಯಕರಿಂದ ಅಸಮಾಧಾನ ವ್ಯಕ್ತವಾಗಿದೆ.
ಎನ್‌ಡಿಎ ಮೈತ್ರಿಕೂಟಕ್ಕೆ ಜೆಡಿಎಸ್ ಅಕ್ಟೋಬರ್‌ನಲ್ಲೇ ಸೇರಿದೆ. ಆರು ತಿಂಗಳು ಕಳೆದರೂ ಉಭಯ ಪಕ್ಷಗಳ ನಡುವಿನ ಸೀಟು ಹಂಚಿಕೆ ಅಂತಿಮಗೊಂಡಿಲ್ಲ.
ಮಂಡ್ಯ, ಹಾಸನ ಹಾಗೂ ಕೋಲಾರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಬಿಜೆಪಿ ವರಿಷ್ಠರು ಈ ಹಿಂದೆ ಸಹಮತ ವ್ಯಕ್ತಪಡಿಸಿದ್ದರು. ಬೆಂಗಳೂರು ಗ್ರಾಮಾಂತರ, ತುಮಕೂರಿನಲ್ಲಿ ಅಭ್ಯರ್ಥಿ ಹಾಗೂ ಚಿಹ್ನೆ ವಿನಿಮಯಕ್ಕೆ ಕುಮಾರಸ್ವಾಮಿ ಅವರು ಶಾ ಅವರ ಮುಂದೆ ಪ್ರಸ್ತಾವ ಮುಂದಿಟ್ಟಿದ್ದರು. ಈ ಸೂತ್ರದ ಬಗ್ಗೆ ವಿಸ್ತೃತ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವ ಬಗ್ಗೆ ಶಾ ಭರವಸೆ ನೀಡಿದ್ದರು. ಆದರೆ, ಇದೀಗ ಬೆಂಗಳೂರು ಗ್ರಾಮಾಂತರಕ್ಕೆ ದೇವೇಗೌಡರ ಕುಟುಂಬದ ಡಾ.ಸಿ.ಎನ್.ಮಂಜುನಾಥ್ ಅವರು ಬಿಜೆಪಿಯ ಅಭ್ಯರ್ಥಿಯಾಗಿದ್ದಾರೆ. ತುಮಕೂರು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯ ಹೆಸರನ್ನೇ ಘೋಷಿಸಲಾಗಿದೆ. ಅದನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿಲ್ಲ. ಇದರ ಬಗ್ಗೆ ಜೆಡಿಎಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ಹೇಳಿವೆ.
ಕೋಲಾರ ಕ್ಷೇತ್ರದಲ್ಲಿ ಬಿಜೆಪಿಯ ಸಂಸದರಿದ್ದು, ಆ ಕ್ಷೇತ್ರವನ್ನು ಜೆಡಿಎಸ್‌ಗೆ ದಾನ ಮಾಡುವುದು ಸರಿಯಲ್ಲ ಎಂದು ರಾಜ್ಯ ನಾಯಕರು ವರಿಷ್ಠರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಕೋಲಾರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ವರಿಷ್ಠರು ಹೆಚ್ಚಿನ ಒಲವು ಹೊಂದಿಲ್ಲ. ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕೆ ಇಳಿಸದಿದ್ದರೆ ಮುಜುಗರ ಅನುಭವಿಸಬೇಕಾಗುತ್ತದೆ. ಮೂರು ಕ್ಷೇತ್ರಗಳನ್ನು ಜೆಡಿಎಸ್‌ಗೆ ನೀಡಲೇಬೇಕು ಎಂದು ಕುಮಾರಸ್ವಾಮಿ ಪಟ್ಟು ಹಿಡಿದಿದ್ದಾರೆ. ಕೋಲಾರವನ್ನು ಬಿಟ್ಟುಕೊಡುವ ಬಗ್ಗೆ ರಾಜ್ಯ ನಾಯಕರ ಜತೆಗೆ ಸಮಾಲೋಚಿಸಿ ಭಾನುವಾರ ನಿಲುವು ತಿಳಿಸುತ್ತೇವೆ ಎಂದು ಶಾ ಅವರು ಕುಮಾರಸ್ವಾಮಿ ಅವರಿಗೆ ತಿಳಿಸಿದರು.
ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಕುರಿತು ಜೆಡಿಎಸ್‌ನಲ್ಲಿ ಚರ್ಚೆಗಳು ನಡೆದಿವೆ. ನಿಖಿಲ್ ಬದಲು ಬೇರೆ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಪರಿಶೀಲನೆ ಮಾಡುವಂತೆ ಕುಮಾರಸ್ವಾಮಿ ಅವರಿಗೆ ಶಾ ಸಲಹೆ ನೀಡಿದರು ಎಂದು ಮೂಲಗಳು ತಿಳಿಸಿವೆ. ಮಂಡ್ಯದಿಂದ ಸ್ಪರ್ಧಿಸಲು ಕುಮಾರಸ್ವಾಮಿ ಒಪ್ಪಲಿಲ್ಲ.