ಕಾಸರಗೋಡು: ಗ್ರಾಮಸಭೆಗಳ ಮೂಲಕ ಮತದಾರರ ಪಟ್ಟಿ ನವಿಕರಿಸುವ ಕಾರ್ಯ ಜಿಲ್ಲೆಯಲ್ಲಿ ಉತ್ತಮ ರೀತಿಯಲ್ಲಿ ನಡೆಯುತ್ತಿದ್ದು, ನಾಮಪತ್ರ ಸಲ್ಲಿಕೆಗೆ ಹತ್ತು ದಿನಗಳ ಮೊದಲಿನ ವರೆಗೂ ಮತದಾರರಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ ಕಲ್ಪಿಸಿರುವುದಾಗಿ ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲೆಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಚುನಾವಣಾ ಗ್ರಾಮಸಭೆಗಳನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಮತದಾರರ ಪಟ್ಟಿಯಲ್ಲಿನ ಲೋಪ ತಿದ್ದುಪಡಿ, ಹೆಸರು ಸೇರ್ಪಡೆ, ಹೊರತುಪಡಿಸುವಿಕೆ ನಡೆಸುವ ಮೂಲಕ ಜಿಲ್ಲೆಯ ಮತದಾರರ ಪಟ್ಟಿಯನ್ನು ಸುಧಾರಿಸಲಾಗಿದೆ. ನಾಮಪತ್ರ ಸಲ್ಲಿಸುವಾಗ ಯಾವುದೇ ತಪ್ಪು ಆಗದಂತೆ ಎಚ್ಚರಿಕೆ ವಹಿಸಬೇಕು, ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳ ಸಾಮಾಜಿಕ ಜಾಲತಾಣಗಳ ಖಾತೆಗಳ ಮೇಲೆ ನಿಗಾ ವಹಿಸಬೇಕು ಮತ್ತು ನೀತಿ ಸಂಹಿತೆ ಉಲ್ಲಂಘನೆ ಗಮನಕ್ಕೆ ಬಂದರೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳ ಚುನಾವಣೆಗೆ ಸಂಬಂಧಿಸಿದ ಖರ್ಚು ವೆಚ್ಚಗಳ ಬಗ್ಗೆ ನಿಖರವಾಗಿ ನಿಗಾ ವಹಿಸಲಾಗುವುದು, ಇದಕ್ಕಾಗಿ ಜಿಲ್ಲೆಯಲ್ಲಿ ಉತ್ತಮ ವ್ಯವಸ್ಥೆ ಸಿದ್ಧಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲಾ ಮಟ್ಟದ ಮಾಸ್ಟರ್ ಟ್ರೈನರ್ ಟಿ.ವಿ.ಸಜೀವನ್ ಅವರು ಚುನಾವಣಾ ಹಸಿರು ನಿಯಮಗಳ ಕುರಿತು ತರಗತಿ ನಡೆಸಿದರು. ನಾಮನಿರ್ದೇಶನಕ್ಕೆ ಸಂಬಂಧಿಸಿದಂತೆ, ರಾಜ್ಯ ಮಟ್ಟದ ಮಾಸ್ಟರ್ ಟ್ರೈನರ್ ಸಜಿತ್ ಪಾಲೇರಿ, ರಾಜ್ಯ ಮಟ್ಟದ ಮಾಸ್ಟರ್ ಟ್ರೇನರ್ ಬಿ.ಎನ್.ಸುರೇಶ್ ಅವರೂ ನೀತಿ ಸಂಹಿತೆ ಕುರಿತು ತರಗತಿ ನಡೆಸಿದರು. ಜಿಲ್ಲೆಯ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ತರಬೇತಿಯಲ್ಲಿ ಭಾಗವಹಿಸಿದ್ದರು.