ಉಡುಪಿ: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ಹಾಗೂ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಸಮಿತಿ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಎ.20ರ ಬೆಳಗ್ಗೆ 10:30ಕ್ಕೆ ಎಂ.ಜಿ.ಎಂ ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ನಡೆಯಲಿದೆ.
ಈ ವರ್ಷದ ಪ್ರಶಸ್ತಿಯನ್ನು ಪ್ರಸಿದ್ಧ ಗಮಕ ವ್ಯಾಖ್ಯಾನಕಾರರಾದ ಡಾ. ಕಬ್ಬಿನಾಲೆ ವಸಂತ ಭಾರದ್ವಾಜ್ ಅವರಿಗೆ ಪ್ರದಾನ ಮಾಡಲಾಗುವುದು. ಹಿರಿಯ ವಿದ್ವಾಂಸ ನಾಡೋಜ ಪ್ರೊ.ಕೆ.ಪಿ.ರಾವ್ ಪ್ರಶಸ್ತಿ ಪ್ರದಾನ ಮಾಡಲಿರುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಸಮಿತಿ ಅಧ್ಯಕ್ಷ ಡಾ.ನಾ.ದಾಮೋದರ ಶೆಟ್ಟಿ ವಹಿಸಲಿದ್ದಾರೆ.
ನಗರದ ಪೂರ್ಣಪ್ರಜ್ಞ ಕಾಲೇಜಿನ ಕನ್ನಡ ಉಪನ್ಯಾಸಕ ಡಾ. ಶಿವಕುಮಾರ ಅಳಗೋಡು ಅಭಿನಂದನಾ ಭಾಷಣ ಮಾಡಲಿರು ವರು. ಪ್ರಶಸ್ತಿ ಸಮಿತಿಯ ಕಾರ್ಯದರ್ಶಿ ಮನೋರಮ ಎಂ. ಭಟ್ ಹಾಗೂ ಎಂ.ಜಿ.ಎಂ ಕಾಲೇಜಿನ ಪ್ರಾಂಶುಪಾಲ ಪ್ರೊ.ಲಕ್ಷ್ಮೀ ನಾರಾಯಣ ಕಾರಂತ ಉಪಸ್ಥಿತರಿರುವರು.
ಇದೇ ಸಂದರ್ಭದಲ್ಲಿ ಮುಳಿಯ ಗೋಪಾಲಕೃಷ್ಣ ಭಟ್ಟರು ಬರೆದ 'ಚಾಣಕ್ಯ ತಂತ್ರ' ಕೃತಿಯನ್ನು ಮುಳಿಯ ರಾಘವಯ್ಯ ಬಿಡುಗಡೆಗೊಳಿಸಲಿರುವರು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.