ಕಾಸರಗೋಡು: ಜಿಲ್ಲೆಯಲ್ಲಿ ಶಾಂತಿ-ಭದ್ರತೆ ಕಾಪಾಡಲು ಹಾಗೂ ಸಾರ್ವತ್ರಿಕ ಚುನಾವಣೆಯನ್ನು ಮುಕ್ತ ಹಾಗೂ ನಿಷ್ಪಕ್ಷಪಾತವಾಗಿ ನಡೆಸಲು ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ಅವರು ಸೆಕ್ಷನ್ 144 ಸಿ.ಆರ್.ಪಿ.ಸಿ, 1973 ರ ಅಡಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ. ಜಿಲ್ಲೆಯಲ್ಲಿ ಏಪ್ರಿಲ್ 24ರ ಸಂಜೆ 6 ರಿಂದ ಏಪ್ರಿಲ್ 27 ರ ಸಂಜೆ 6 ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಐದಕ್ಕಿಂತ ಹೆಚ್ಚು ಮಂದಿ ಜನ ಸೇರುವ ಸಾರ್ವಜನಿಕ ಸಭೆ, ಸಮಾರಂಭಗಳಿಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿ ಐದಕ್ಕಿಂತ ಹೆಚ್ಚು ಜನರನ್ನು ಒಟ್ಟುಗೂಡಿಸುವಂತಿಲ್ಲ.
ಅಭ್ಯರ್ಥಿಗಳಿಂದ ಮನೆ-ಮನೆಗಳಲ್ಲಿ ಮೌನ ಪ್ರಚಾರಕ್ಕೆ ಅಡ್ಡಿಯಿಲ್ಲ. ವೈದ್ಯಕೀಯ ತುರ್ತು ಪರಿಸ್ಥಿತಿಗಳು, ಕಾನೂನು ಮತ್ತು ಸುವ್ಯವಸ್ಥೆ ನಿರ್ವಹಣೆ, ಅಗ್ನಿಶಾಮಕ ಸೇವೆಗಳು ಮತ್ತು ಸರ್ಕಾರಿ ವ್ಯವಸ್ಥೆಗಳಂತಹ ಅಗತ್ಯ ಸೇವೆಗಳು ಅಡೆತಡೆಯಿಲ್ಲದೆ ಕಾರ್ಯನಿರ್ವಹಿಸುವುದನ್ನು ಮುಂದುವರಿಸಬಹುದು. ನಿಷೇಧಾಜ್ಞೆ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸೂಚಿಸಲಾಗಿದೆ.