ನವದೆಹಲಿ: ಈ ಬಾರಿಯ ಲೋಕಸಭೆ ಚುನಾವಣೆಯು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ನಾಶಪಡಿಸಲು ಪ್ರಯತ್ನಿಸುತ್ತಿರುವ ಶಕ್ತಿಗಳು ಮತ್ತು ಅವುಗಳನ್ನು ರಕ್ಷಿಸುವ ಶಕ್ತಿಗಳ ನಡುವಿನ ಚುನಾವಣೆಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.
ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇದು ಮಾಧ್ಯಮಗಳು ಪ್ರಚಾರ ಮಾಡುತ್ತಿರುವುದಕ್ಕಿಂತ ಹೆಚ್ಚು ನಿಕಟ ಸ್ಪರ್ಧೆಯಾಗಿದೆ ಎಂದ ಅವರು, ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
2004ರ ಲೋಕಸಭಾ ಚುನಾವಣೆಗೆ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎಯ ಆಕ್ರಮಣಕಾರಿ 'ಇಂಡಿಯಾ ಶೈನಿಂಗ್' ಅಭಿಯಾನವನ್ನು ಉಲ್ಲೇಖಿಸಿದ ಅವರು, 'ಆ ಅಭಿಯಾನವನ್ನು ಯಾರು ಗೆದ್ದಿದ್ದಾರೆಂದು ನೆನಪಿಸಿಕೊಳ್ಳಿ' ಎಂದು ಹೇಳಿದರು.
ಅಂದಿನ ಚುನಾವಣೆಯಲ್ಲಿ ಬಿಜೆಪಿ ಸೋತು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದಿತ್ತು.
ಇಂಡಿಯಾ ಮೈತ್ರಿಕೂಟವು ಸೈದ್ಧಾಂತಿಕ ಚುನಾವಣೆಯನ್ನು ಎದುರಿಸುತ್ತಿದೆ ಎಂದು ನಿರ್ಧರಿಸಿದೆ ಮತ್ತು ಚುನಾವಣೆಯ ನಂತರ ಪ್ರಧಾನಿ ಅಭ್ಯರ್ಥಿಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಏಳು ಹಂತದ ಲೋಕಸಭೆ ಚುನಾವಣೆ ಏಪ್ರಿಲ್ 19 ರಂದು ಮತದಾನ ಆರಂಭವಾಗಲಿದೆ.
ಅಪ್ರೆಂಟಿಸ್‌ಶಿಪ್ ಹಕ್ಕು, ಎಂಎಸ್‌ಪಿಗೆ ಕಾನೂನು ಖಾತರಿ ಸೇರಿದಂತೆ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಮೀಸಲಾತಿಯಲ್ಲಿ ಶೇ 50 ರಷ್ಟು ಮಿತಿಯನ್ನು ಹೆಚ್ಚಿಸಲು ಸಾಂವಿಧಾನಿಕ ತಿದ್ದುಪಡಿಯನ್ನು ಅಂಗೀಕರಿಸುವುದು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳಲ್ಲಿ ಒಂದಾಗಿದೆ.
ನ್ಯಾಯಪತ್ರದ ಹೆಸರಿನಲ್ಲಿ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ಸಮ್ಮುಖದಲ್ಲಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಯಿತು.
ಕೇಂದ್ರ ಸರ್ಕಾರದ ವಿವಿಧ ಹಂತಗಳಲ್ಲಿ ಮಂಜೂರಾದ ಹುದ್ದೆಗಳಲ್ಲಿ ಖಾಲಿ ಇರುವ ಸುಮಾರು 30 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪಕ್ಷ ಭರವಸೆ ನೀಡಿದೆ. ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲಾ ಜಾತಿಗಳು, ಸಮುದಾಯಗಳಿಗೆ ತಾರತಮ್ಯವಿಲ್ಲದೆ ಉದ್ಯೋಗ, ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ (ಇಡಬ್ಲ್ಯುಎಸ್) ಶಿಕ್ಷಣ ಸಂಸ್ಥೆಗಳಲ್ಲಿ ಶೇ 10 ರಷ್ಟು ಮೀಸಲಾತಿ ಜಾರಿಗೊಳಿಸುವುದಾಗಿ ಹೇಳಿದೆ.