ತಿರುವನಂತಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು (ಸೋಮವಾರ) ಕೇರಳದಲ್ಲಿ ನಡೆಯಬೇಕಿದ್ದ ಚುನಾವಣಾ ಪ್ರಚಾರವನ್ನು ರದ್ದುಗೊಳಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇಂದು ನಡೆಯಬೇಕಿದ್ದ ರಾಹುಲ್ ಗಾಂಧಿಯವರ ಎಲ್ಲಾ ಸಾರ್ವಜನಿಕ ಸಭೆಗಳನ್ನು ರದ್ದುಗೊಳಿಸಲಾಗಿದೆ ಎಂದು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಹಂಗಾಮಿ ಅಧ್ಯಕ್ಷ, ಯುಡಿಎಫ್ ಸಂಚಾಲಕ ಎಂ.ಎಂ ಹಾಸನ್ ಹೇಳಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ಭಾನುವಾರ ಸಾತ್ನಾ ಮತ್ತು ರಾಂಚಿಯಲ್ಲಿ ನಡೆದ 'ಇಂಡಿಯಾ' ಮೈತ್ರಿ ಕೂಟದ ರ‍್ಯಾಲಿಯಲ್ಲಿ ಪಾಲ್ಗೊಂಡಿರಲಿಲ್ಲ. ಈ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ 'ಎಕ್ಸ್'ನಲ್ಲಿ ಮಾಹಿತಿ ನೀಡಿದ್ದರು.
ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ಸ್ಪರ್ಧಿಸಲಿದ್ದಾರೆ. ಕೇರಳದ 20 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆಯಲಿದೆ.