ತಿರುವನಂತಪುರ: ಕಾಂಗ್ರೆಸ್ ಮುಖಂಡ ಹಾಗೂ ತಿರುವನಂತಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶಶಿ ತರೂರ್ ಅವರು ತಮ್ಮ ಪ್ರತಿಸ್ಪರ್ಧಿಯಾದ ಬಿಜೆಪಿಯ ರಾಜೀವ್ ಚಂದ್ರಶೇಖರ್ ವಿರುದ್ಧ ಸುಳ್ಳು ಪ್ರಚಾರ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಏಪ್ರಿಲ್ 15ರಂದೇ ಸೈಬರ್ ಪೊಲೀಸರು ಪ್ರಕರಣ ದಾಖಲಿಸಿದ್ದರು. ಶಶಿ ತರೂರ್ ಅವರು ಟಿ.ವಿ ಕಾರ್ಯಕ್ರಮವೊಂದರಲ್ಲಿ ರಾಜೀವ್ ಚಂದ್ರಶೇಖರ್ ವಿರುದ್ಧ ಸುಳ್ಳು ಪ್ರಚಾರ ಮಾಡಿದ್ದರು ಎಂದು ಬಿಜೆಪಿ ಮುಖಂಡ ಜೆ.ಆರ್.ಪದ್ಮಕುಮಾರ್ ನೀಡಿದ್ದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.
ತರೂರ್ ಅವರು ಲೋಕಸಭಾ ಚುನಾವಣೆಯಲ್ಲಿ ಕರಾವಳಿಯ ಮತದಾರರನ್ನು ಪ್ರಭಾವಿಸುವ ಸಂಬಂಧ ರಾಜೀವ್ ಚಂದ್ರಶೇಖರ್ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.