ಜೋಧಪುರ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದರು. ಹಾಗಾಗಿ, ಅವರ ಮೊಮ್ಮಗ ರಾಹುಲ್ ಗಾಂಧಿಗೆ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ಹಕ್ಕು ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಹೇಳಿದರು.
ಜೋಧಪುರ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದರು. ಹಾಗಾಗಿ, ಅವರ ಮೊಮ್ಮಗ ರಾಹುಲ್ ಗಾಂಧಿಗೆ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ಹಕ್ಕು ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಹೇಳಿದರು.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ಖಂಡಿಸಿ ವಿರೋಧ ಪಕ್ಷಗಳ ಮೈತ್ರಿಕೂಟ 'ಇಂಡಿಯಾ' ದೆಹಲಿಯ ರಾಮಲೀಲಾ ಮೈದಾನದಲ್ಲಿ ಭಾನುವಾರ ನಡೆಸಿದ 'ಪ್ರಜಾಪ್ರಭುತ್ವ ಉಳಿಸಿ' ರ್‍ಯಾಲಿಯ ಬಗ್ಗೆ ಶಾ ಕಿಡಿಕಾರಿದರು.
ಜೋಧಪುರದಲ್ಲಿ ನಡೆದ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಅವರು, 'ಭ್ರಷ್ಟಾಚಾರದಲ್ಲಿ ಭಾಗಿಯಾದವರು ಜೈಲಿಗೆ ಹೋಗಲಿದ್ದಾರೆ' ಎಂದು ಹೇಳಿದರು. ಹಾಗೆಯೇ, 'ರ್‍ಯಾಲಿಯಲ್ಲಿ ಎಷ್ಟು ಪಕ್ಷಗಳು ಒಟ್ಟಿಗೆ ಸೇರಿದ್ದವು ಎಂಬುದು ಮುಖ್ಯವೇ ಅಲ್ಲ. ಚುನಾವಣೆ ಬಳಿಕ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಲಿದ್ದಾರೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.
'ಮೋದಿ ಅವರನ್ನು ಮೂರನೇ ಅವಧಿಗೆ ಪ್ರಧಾನಿಯನ್ನಾಗಿ ಮಾಡಲು ದೇಶದ ಜನರು ಸಜ್ಜಾಗಿದ್ದಾರೆ. ಆ ಅವಧಿಯಲ್ಲಿ ದೇಶವು, ವಿಶ್ವದ ಮೂರನೇ ಅತಿ ದೊಡ್ಡ ಆರ್ಥಿಕ ದೇಶವಾಗಿ ಹೊರಹೊಮ್ಮಲಿದೆ' ಎಂದು ಅಭಿಪ್ರಾಯಪಟ್ಟರು.
ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷಗಳ ನಾಯಕರು, ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಉಳಿವಿಗಾಗಿ ಬಿಜೆಪಿ ವಿರುದ್ಧ ಮತ ಚಲಾಯಿಸುವಂತೆ ದೇಶದ ಜನರಿಗೆ ರ್‍ಯಾಲಿ ವೇಳೆ ಕರೆ ನೀಡಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಶಾ, 'ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ಹಕ್ಕು ರಾಹುಲ್ ಗಾಂಧಿಗೆ ಇಲ್ಲ. ಅವರ ಅಜ್ಜಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಲಕ್ಷಾಂತರ ಜನರನ್ನು ಜೈಲಿಗೆ ಅಟ್ಟಿದ್ದರು. ಹಲವು ರಾಜಕೀಯ ಪಕ್ಷಗಳನ್ನು ನಿಷೇಧಿಸಿದ್ದರು' ಎಂದು ಆಕ್ರೋಶ ವ್ಯಕ್ತಪಡಿಸಿದರು.