ನವದೆಹಲಿ: ಜಿಲ್ಲಾ ನ್ಯಾಯಾಲಯಗಳ ನೇಮಕಾತಿಯಲ್ಲಿ ಅಂಗವಿಕಲರಿಗೆ ಶೇಕಡ 4ರಷ್ಟು ಮೀಸಲಾತಿ ಒದಗಿಸುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಕುರಿತು ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಕೇಂದ್ರ, ರಾಜ್ಯ, ಕೇಂದ್ರಾಡಳಿತ ಪ್ರದೇಶ ಸರ್ಕಾರಗಳು ಹಾಗೂ ಎಲ್ಲ ಹೈಕೋರ್ಟ್‌ಗಳಿಗೆ ಸೂಚಿಸಿದೆ.
ನ್ಯಾಯಾಂಗ ಅಧಿಕಾರಿಗಳ ನೇಮಕಾತಿಯಲ್ಲಿ ಅಂಗವಿಕಲರಿಗೆ ಕಾನೂನಿಗೆ ಅನುಗುಣವಾಗಿ ಅವಕಾಶಗಳು ಸಿಗುತ್ತಿಲ್ಲ ಎಂದು ಅರ್ಜಿದಾರರ ಪರ ವಕೀಲರು ಪೀಠಕ್ಕೆ ತಿಳಿಸಿದರು. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನು ಒಳಗೊಂಡ ಪೀಠವು ಅರ್ಜಿಯ ವಿಚಾರಣೆ ನಡೆಸಿತು.