ಪಟ್ನಾ: ಇದೇ 5ರಂದು ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ(ನೀಟ್-ಯುಜಿ) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ, ಬಿಹಾರ ಪೊಲೀಸರು ಇದುವರೆಗೆ 13 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತರಲ್ಲಿ 4 ಮಂದಿ ಪರೀಕ್ಷಾರ್ಥಿಗಳು ಹಾಗೂ ಅವರ ಕುಟುಂಬಸ್ಥರೂ ಸೇರಿದ್ದಾರೆ ಎನ್ನಲಾಗಿದ್ದು, ಪರೀಕ್ಷೆಗೂ ಮೊದಲು ಆರೋಪಿಗಳು ಅಂದಾಜು 35 ಜನ ವಿದ್ಯಾರ್ಥಿಗಳೊಂದಿಗೆ ಪ್ರಶ್ನೆಗಳನ್ನು ಹಂಚಿಕೊಂಡಿದ್ದಾರೆಂದು ಪೊಲೀಸರು ಶಂಕಿಸಿದ್ದಾರೆ.
'ಈ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಬಿಹಾರ ಪೊಲೀಸ್ ಇಲಾಖೆಯ ಆರ್ಥಿಕ ಅಪರಾಧ ಘಟಕ(ಇಒಯು) ವಹಿಸಿಕೊಂಡಿದ್ದು, 13 ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಒಬ್ಬ ಆರೋಪಿಯು ಬಿಹಾರ ಲೋಕಸೇವಾ ಆಯೋಗ(ಬಿಪಿಎಸ್‌ಸಿ) ನಡೆಸಿದ್ದ ಶಿಕ್ಷಕರ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎಂದು ಶಂಕಿಸಲಾಗಿದೆ' ಎಂಬುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಎಲ್ಲ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಬಂಧಿತರಿಂದ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳು ಮತ್ತು ಎಲೆಕ್ಟ್ರಾನಿಕ್ ಉಪಕರಣಗಳನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.