ನವದೆಹಲಿ: ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಸಿಲುಕಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗ, ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಮಗ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಿದ ಜೆಡಿಎಸ್ ನಿರ್ಧಾರವನ್ನು ಬಿಜೆಪಿ ಸ್ವಾಗತಿಸಿದೆ.
ನವದೆಹಲಿ: ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಸಿಲುಕಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗ, ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಮಗ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಿದ ಜೆಡಿಎಸ್ ನಿರ್ಧಾರವನ್ನು ಬಿಜೆಪಿ ಸ್ವಾಗತಿಸಿದೆ.
ಆರೋಪಿ ವಿರುದ್ಧ ಕಾನೂನಿನ ಸಂಪೂರ್ಣ ಬಲ ಪ್ರಯೋಗಿಸಿ, ಕಠಿಣ ಕ್ರಮಕ್ಕೆ ಬಿಜೆಪಿ ಒತ್ತಾಯಿಸುತ್ತದೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.
ಮಹಿಳೆಯರ ವಿರುದ್ಧದ ಅಪರಾಧಗಳ ಬಗ್ಗೆ ಬಿಜೆಪಿ ಶೂನ್ಯ ಸಹಿಷ್ಣುತೆ ಹೊಂದಿದೆ. ಇದೇವೇಳೆ, ಕಾಂಗ್ರೆಸ್ ದ್ವಂದ್ವ ನೀತಿ ಪ್ರದರ್ಶಿಸುತ್ತಿದ್ದು, ಅನುಕೂಲಕ್ಕೆ ತಕ್ಕಂತೆ ವರ್ತಿಸುತ್ತಿದೆ ಎಂದು ದೂರಿದ್ದಾರೆ.
ಕೆಲ ವಾರಗಳು, ತಿಂಗಳ ಹಿಂದೆಯೇ ಲೈಂಗಿಕ ಹಗರಣದ ಬಗ್ಗೆ ಕರ್ನಾಟಕ ಸರ್ಕಾರಕ್ಕೆ ತಿಳಿದಿದ್ದರೂ ಆರೋಪಿ ವಿರುದ್ಧ ಕ್ರಮ ಕೈಗೊಳ್ಳಲಿಲ್ಲವೇಕೆ? ಎಂದು ಅವರು ಪ್ರಶ್ನಿಸಿದ್ದಾರೆ.
ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಸಿಲುಕಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಇಂದು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಲಾಗಿದೆ.
ಸಂದೇಶ್‌ಖಾಲಿ ಮತ್ತು ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ವಿಷಯ ಪ್ರಸ್ತಾಪಿಸಿದ ರಾಜೀವ್ ಚಂದ್ರಶೇಖರ್, ತಮಗೆ ಅನುಕೂಲಕರವಾದ ಪ್ರಕರಣ ಮತ್ತು ಸಂತ್ರಸ್ತರ ಬಗ್ಗೆ ಮಾತ್ರ ಕಾಂಗ್ರೆಸ್ ಮಾತನಾಡುತ್ತದೆ ಎಂದು ಟೀಕಿಸಿದ್ದಾರೆ.
ಕೇರಳದ ತಿರುವನಂತಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಶಶಿ ತರೂರ್ ವಿರುದ್ಧ ಸ್ಪರ್ಧಿಸಿರುವ ರಾಜೀವ್ ಚಂದ್ರಶೇಖರ್, ಜೂನ್ 4ರಂದು ಮತ ಎಣಿಕೆ ಬಳಿಕ ಇತಿಹಾಸ ಸೃಷ್ಟಿಯಾಗಲಿದೆ ಎಂದು ಹೇಳಿದ್ದಾರೆ.
ಕೇರಳ ಮತ್ತು ತಮಿಳುನಾಡಿನಲ್ಲಿ ಬಿಜೆಪಿಗೆ ಉತ್ತಮ ವಾತಾವರಣವಿದ್ದು, ದಕ್ಷಿಣ ಭಾರತದಿಂದ ಬಿಜೆಪಿ 60 ಸ್ಥಾನಗಳನ್ನು ಗೆಲ್ಲಬಹುದು ಎಂದಿದ್ದಾರೆ.