ನವದೆಹಲಿ: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವವರೆಗೆ ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಟಿಎಂಸಿ ಮುಖಂಡರು ಮತ್ತು ಕಾರ್ಯಕರ್ತರ ವಿರುದ್ಧ ಯಾವುದೇ ಜಾಹೀರಾತುಗಳನ್ನು ಪ್ರಕಟಿಸಬಾರದು ಎಂದು ಕಲ್ಕತ್ತಾ ಹೈಕೋರ್ಟ್‌ನ ಏಕ ಸದಸ್ಯ ಪೀಠ ನೀಡಿರುವ ತೀರ್ಪಿನಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
ಇದರಿಂದಾಗಿ ಕಲ್ಕತ್ತಾ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಮೊರೆ ಹೋಗಿದ್ದ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದೆ.
ಈ ಕುರಿತ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ.ಕೆ.ಮಾಹೇಶ್ವರಿ ಮತ್ತು ಕೆ.ವಿ. ವಿಶ್ವನಾಥ ಅವರಿದ್ದ ಪೀಠವು, ಮೇಲ್ನೋಟಕ್ಕೆ ಬಿಜೆಪಿ ಪ್ರಕಟಿಸಲು ಮುಂದಾಗಿರುವ ಜಾಹೀರಾತುಗಳು ಕೆಲವು ವ್ಯಕ್ತಿಗಳಿಗೆ ಅಗೌರವ ತೋರುವಂತಿದೆ ಎಂದು ಹೇಳಿದೆ. ಹೀಗಾಗಿ, ಬಿಜೆಪಿಯು ತನ್ನ ಅರ್ಜಿಯನ್ನು ಹಿಂಪಡೆಯಿತು.
ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುವ ಜೂನ್ 4ರವರೆಗೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಜಾಹೀರಾತುಗಳನ್ನು ಪ್ರಕಟಿಸದಂತೆ ಮೇ 20ರಂದು ಏಕ ಸದಸ್ಯ ನ್ಯಾಯಪೀಠ ಬಿಜೆಪಿಗೆ ಸೂಚನೆ ನೀಡಿತ್ತು. ಅಲ್ಲದೆ, ಪಶ್ಚಿಮ ಬಂಗಾಳದ ಆಡಳಿತಾರೂಢ ಟಿಎಂಸಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ವಿರುದ್ಧದ ಜಾಹೀರಾತುಗಳನ್ನೂ ಪ್ರಕಟಿಸಬಾರದು ಎಂದು ಸೂಚಿಸಿತ್ತು.
ತನ್ನ ಕಾರ್ಯಕರ್ತರು ಮತ್ತು ಮುಖಂಡರ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ, ಪ್ರಕಟಿಸುವ ಜಾಹೀರಾತುಗಳನ್ನು ನಿರ್ಬಂಧಿಸುವಂತೆ ಕೋರಿ ಟಿಎಂಸಿ ನ್ಯಾಯಾಲಯದ ಮೊರೆ ಹೋಗಿತ್ತು.