ಜಮ್ಮು
: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಭಾನುವಾರ ಸಂಜೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ಸಿನ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ ಮತ್ತು 33 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
53 ಆಸನಗಳ ಬಸ್, ಶಿವ ಖೋರಿ ದೇವಸ್ಥಾನದಿಂದ ಕತ್ರಾ ಮಾರ್ಗವಾಗಿ ತೆರಳುತ್ತಿದ್ದ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಚಲಿಸುತ್ತಿದ್ದ ವೇಳೆಯೇ ದಾಳಿ ನಡೆಸಿದ ಪರಿಮಾಣ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಆಳವಾದ ಕಮರಿಗೆ ಬಿದ್ದಿದೆ. ಪೋನಿ ಪ್ರದೇಶದ ತೇರ್ಯತ್ ಗ್ರಾಮದ ಬಳಿ ಸಂಜೆ 6.15 ರ ಸುಮಾರಿಗೆ ಈ ದಾಳಿ ನಡೆದಿದೆ.
ಘಟನೆಯಲ್ಲಿ ಒಂಬತ್ತು ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ ಮತ್ತು 33 ಮಂದಿ ಗಾಯಗೊಂಡಿದ್ದಾರೆ ಎಂದು ರಿಯಾಸಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮೋಹಿತಾ ಶರ್ಮಾ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಈ ದಾಳಿಯು ಪ್ರದೇಶದಲ್ಲಿ ಹಿಂಸಾಚಾರದಲ್ಲಿ ಗಮನಾರ್ಹ ಏರಿಕೆಯನ್ನು ಸೂಚಿಸುತ್ತದೆ. ನೆರೆಯ ಪ್ರದೇಶಗಳಾದ ರಜೌರಿ ಮತ್ತು ಪೂಂಚ್‌ಗೆ ಹೋಲಿಸಿದರೆ ರಿಯಾಸಿ ಜಿಲ್ಲೆಯಲ್ಲಿ ಭಯೋತ್ಪಾದಕ ಚಟುವಟಿಕೆಗಳು ಕಡಿಮೆ ಎನ್ನಲಾಗಿದೆ.