ನವದೆಹಲಿ: ಆರ್‌ಎಸ್‌ಎಸ್ ನಿಷ್ಠಾವಂತ ಮತ್ತು ಕರ್ನಾಟಕದ ಕೇಸರಿ ಪಕ್ಷದ ಭದ್ರಕೋಟೆಯಾದ ಧಾರವಾಡದಿಂದ ಐದನೇ ಬಾರಿ ಸಂಸತ್ತಿಗೆ ಆಯ್ಕೆಯಾಗಿರುವ ಪ್ರಲ್ಹಾದ್ ಜೋಶಿ ಅವರು ಭಾನುವಾರ ಎನ್‌ಡಿಎ ಸರ್ಕಾರದಲ್ಲಿ ಎರಡನೇ ಬಾರಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಇಂದು ರಾತ್ರಿ 7:15ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಲ್ಹಾದ್ ಜೋಶಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದ ಬಳಿಕ ಹದಿನೆಂಟನೇಯವರಾಗಿ ಪ್ರಹ್ಲಾದ್ ಜೋಶಿ ಅವರು ದೇವರ ಹೆಸರಿನಲ್ಲಿ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕ ಅಮಿತ್ ಶಾ ಅವರ ಆಪ್ತರಾಗಿರುವ ಪ್ರಹ್ಲಾದ್ ಜೋಶಿ ಅವರು ಹಿಂದಿನ ಸಂಪುಟದಲ್ಲಿ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಖಾತೆಗಳನ್ನು ಹೊಂದಿದ್ದರು.
ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಅವರು ಕಾಂಗ್ರೆಸ್‌ನ ವಿನೋದ್ ಅಸೋಟಿ ಅವರ ವಿರುದ್ಧ 97,324 ಮತಗಳ ಅಂತರದಿಂದ ಗೆದ್ದಿದ್ದಾರೆ.