ನವದೆಹಲಿ: ಯುಜಿ-ನೀಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಲ್ಲಿನ ಅಕ್ರಮಗಳ ಕುರಿತು ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಮಹಾನಿರ್ದೇಶಕ ಸುಬೋಧ್ ಸಿಂಗ್ ಅವರನ್ನು ಆ ಹುದ್ದೆಯಿಂದ ಶನಿವಾರ ತೆಗೆದು ಹಾಕಲಾಗಿದ್ದು, ಅವರ ಸ್ಥಾನಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಪ್ರದೀಪ್ ಸಿಂಗ್ ಖರೋಲಾ ಅವರನ್ನು ನೇಮಕ ಮಾಡಲಾಗಿದೆ.
ಮುಂದಿನ ಆದೇಶದವರೆಗೆ ಅವರನ್ನು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯಲ್ಲಿ (ಡಿಒಪಿಟಿ) 'ಕಡ್ಡಾಯ ಕಾಯುವಿಕೆ'ಯಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
'ಇಂಡಿಯಾ ಟ್ರೇಡ್ ಪ್ರಮೋಷನ್ ಆರ್ಗನೈಸೇಷನ್' (ಐಟಿಪಿಒ) ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಪ್ರದೀಪ್ ಸಿಂಗ್ ಖರೋಲಾ ಅವರಿಗೆ ಎನ್‌ಟಿಎ ಮಹಾನಿರ್ದೇಶಕ ಹುದ್ದೆಯನ್ನು ಹೆಚ್ಚುವರಿಯಾಗಿ ವಹಿಸಲಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾರದರ್ಶಕ ಮತ್ತು ನ್ಯಾಯೋಚಿತವಾಗಿ ನಡೆಸಲು ಹಾಗೂ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಕಾರ್ಯವಿಧಾನವನ್ನು ಸಮಗ್ರವಾಗಿ ಪರಿಶೀಲಿಸಲು ಕೇಂದ್ರ ಸರ್ಕಾರವು ಇಸ್ರೊ ಮಾಜಿ ಮುಖ್ಯಸ್ಥ ಕೆ. ರಾಧಾಕೃಷ್ಣನ್ ನೇತೃತ್ವದಲ್ಲಿ ಉನ್ನತ ಮಟ್ಟದ ತಜ್ಞರ ಸಮಿತಿಯನ್ನು ರಚಿಸಿದ ಕೆಲವೇ ಗಂಟೆಗಳ ನಂತರ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ.
ಈ ನಡುವೆ ಇಂದು ನಡೆಯಬೇಕಿದ್ದ ನೀಟ್-ಪಿಜಿ ಪರೀಕ್ಷೆ ಮುನ್ನೆಚ್ಚರಿಕೆ ಕ್ರಮವಾಗಿ ಮುಂದೂಡಿಕೆ ಮಾಡಲಾಗಿದೆ.