ನವದೆಹಲಿ: UGC-NET ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದುಗೊಳಿಸಿದ್ದು, ಶೀಘ್ರದಲ್ಲೇ ಹೊಸದಾಗಿ ಪರೀಕ್ಷೆ ನಡೆಸುವುದಾಗಿ ಶಿಕ್ಷಣ ಸಚಿವಾಲಯದ ಅಧಿಕಾರಿಗಳು ಗುರುವಾರ ಹೇಳಿದ್ದಾರೆ.
UGC-NET ಪರೀಕ್ಷೆಯ ಕುರಿತು ಯಾವುದೇ ದೂರುಗಳು ಬಂದಿಲ್ಲ. ಆದರೆ ಲಭ್ಯವಿರುವ ಆಂತರಿಕ ಮಾಹಿತಿಯನ್ನು ಆಧರಿಸಿ ಸ್ವಯಂ ಪ್ರೇರಿತವಾಗಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಮೇಲ್ನೋಟಕ್ಕೆ UGC-NET ಪರೀಕ್ಷೆಯಲ್ಲಿ ರಾಜಿ ಮಾಡಿಕೊಳ್ಳಲಾಗಿದೆ ಎಂಬುದು ಖಚಿತವಾಗಿದೆ. ಹೀಗಾಗಿ ಮತ್ತೊಮ್ಮೆ ಪರೀಕ್ಷೆ ನಡೆಸಲಾಗುವುದು ಮತ್ತು ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಪರೀಕ್ಷಾ ಪ್ರಕ್ರಿಯೆಯ ಅತ್ಯುನ್ನತ ಮಟ್ಟದ ಪಾರದರ್ಶಕತೆಗೆ ಧಕ್ಕೆಯುಂಟಾಗಿದೆ ಎಂಬ ಮಾಹಿತಿಗಳ ಲಭಿಸಿರುವುದರಿಂದ ರಾಷ್ಟ್ರೀಯ ಪರೀಕ್ಷೆ ಸಂಸ್ಥೆಯು ಜೂನ್ 18 ರಂದು ನಡೆಸಿದ್ದ ಯುಜಿಸಿ-ನೆಟ್ ಪರೀಕ್ಷೆಯನ್ನು ಶಿಕ್ಷಣ ಸಚಿವಾಲಯ ರದ್ದುಗೊಳಿಸಿದೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ(I4C) ರಾಷ್ಟ್ರೀಯ ಸೈಬರ್ ಕ್ರೈಮ್ ಥ್ರೆಟ್ ಅನಾಲಿಟಿಕ್ಸ್ ಘಟಕದಿಂದ ಪರೀಕ್ಷೆಯಲ್ಲಿ ಕೆಲವು ಅಕ್ರಮಗಳು ನಡೆದಿರುವ ಬಗ್ಗೆ ಯುನಿವರ್ಸಿಟಿ ಗ್ರಾಂಟ್ಸ್ ಕಮಿಷನ್(UGC)ಗೆ ಮಾಹಿತಿ ಲಭಿಸಿದೆ. ಈ ಅಕ್ರಮಗಳಿಂದ ಮೇಲ್ನೋಟಕ್ಕೆ ಪರೀಕ್ಷೆಯ ಪಾರದರ್ಶಕತೆಗೆ ಮತ್ತು ಸಮಗ್ರತೆಯಲ್ಲಿ ರಾಜಿ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.