ವಾಷಿಂಗ್ಟನ್: ಮೂರನೇ ಬಾರಿಗೆ ಪ್ರಧಾನಿ ಹುದ್ದೆಗೆ ಏರುತ್ತಿರುವ ನರೇಂದ್ರ ಮೋದಿ ಅವರಿಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಶುಭಾಶಯ ಕೋರಿದ್ದಾರೆ.
ಭಾರತ ಮತ್ತು ಅಮೆರಿಕದ ಬಾಂಧವ್ಯ ಮುಂದುವರಿಸುವ ಮೂಲಕ ವಿವಿಧ ಕ್ಷೇತ್ರಗಳಲ್ಲಿ ತನ್ನ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸಲು ಬಯಸುವುದಾಗಿ ಬೈಡನ್ ಹೇಳಿದ್ದಾರೆ.
ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಪ್ರಜಾಪ್ರಭುತ್ವದ ಐತಿಹಾಸಿಕ ಚುನಾವಣೆಯಲ್ಲಿ ಮತದಾರರು ಮತ್ತೊಮ್ಮೆ ಗೆಲುವು ಸಾಧಿಸಲು ಒಲವು ತೋರಿದ್ದಾರೆ. ಮೂರನೇ ಬಾರಿಗೆ ಪ್ರಧಾನಿಯಾಗಿ ಮುಂದುವರಿಯುತ್ತಿರುವುದು ಸಂತಸ ತಂದಿದೆ. ಭಾರತ ಮತ್ತು ಅಮೆರಿಕ ಸ್ನೇಹವು ಮತ್ತಷ್ಟು ಬಲಿಷ್ಠಗೊಳ್ಳಲಿದೆ. ಈ ಮೂಲಕ ಜಾಗತಿಕ ಮಟ್ಟದಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಲು ಸಹಾಯಕವಾಗಲಿದೆ ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಸದ್ಯ ಫ್ರಾನ್ಸ್ ಪ್ರವಾಸದಲ್ಲಿರುವ ಬೈಡನ್ ದೂರವಾಣಿ ಕರೆ ಮೂಲಕ ಮೋದಿ ಅವರಿಗೆ ಶುಭಾಶಯ ಕೋರಿದ್ದಾರೆ .
ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ಭಾರತ ಪ್ರಜಾಪ್ರಭುತ್ವ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿರುವುದು ಸಂತಸವಾಗಿದೆ. ಮುಂಬರುವ ದಿನಗಳಲ್ಲಿ ಭಾರತ- ಅಮೆರಿಕ ಸ್ನೇಹವು ಜಾಗತಿಕವಾಗಿ ಹೊಸ ಹೆಗ್ಗುರುತುಗಳಿಗೆ ಸಾಕ್ಷಿಯಾಗಲಿದೆ. ನಮ್ಮ ಪಾಲುದಾರಿಕೆಯು ವಿಶ್ವದ ಒಳಿತಿಗಾಗಿ ಶಕ್ತಿಯಾಗಿ ಪರಿವರ್ತನೆಯಾಗಲಿದೆ ಎಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಸಿಂಗಪುರ ಪ್ರಧಾನಿ ಲಾರೆನ್ಸ್ ವಾಂಗ್ ಮತ್ತು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಸೇರಿದಂತೆ ವಿಶ್ವದ 75ಕ್ಕೂ ಹೆಚ್ಚು ನಾಯಕರು ಅಭಿನಂದನೆಯನ್ನು ತಿಳಿಸಿದ್ದಾರೆ. ಈ ವೇಳೆ ಮೋದಿ ಅವರು ಉತ್ತಮ ಬಾಂಧವ್ಯವನ್ನು ಕಾಪಾಡಿಕೊಳ್ಳುವ ಮೂಲಕ ಜಾಗತಿಕ ಮಟ್ಟದಲ್ಲಿ ಪಾಲುದಾರಿಕೆಯನ್ನು ಮುಂದುವರಿಸಲು ಬಯಸುವುದಾಗಿ ಹೇಳಿದ್ದಾರೆ.